ಕೊಡ್ಲಿಪೇಟೆ, ಸೆ. ೧೬: ಜಿಲ್ಲೆಯಲ್ಲಿ ಹಾಕಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧೀನದಲ್ಲಿರುವ ಸುಮಾರು ಎಂಟು ಎಕರೆ ಮೈದಾನದಲ್ಲಿ ಸುಸಜ್ಜಿತವಾದ ಹಾಕಿ ಮೈದಾನವನ್ನು ನಿರ್ಮಿಸುವುದರೊಂದಿಗೆ ಹಾಕಿ ಅಕಾಡೆಮಿ ಸ್ಥಾಪಿಸುವ ಚಿಂತನೆ ಇದೆ ಎಂದು ಹೈಕೋರ್ಟ್ ಹಿರಿಯ ವಕೀಲ, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ ಹೇಳಿದರು.

ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ೧೪ ಮತ್ತು ೧೭ ವಯೋಮಾನದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಾಧನೆ ಮಾಡಬೇಕು. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ಇದೆ. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ದೊರೆಯುತ್ತದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಕೊಡಗು ಜಿಲ್ಲಾ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಕ್ರೀಡೆ ಒಂದು ದಿನಕ್ಕೆ ಸೀಮಿತವಾಗಬಾರದು. ನಿತ್ಯ ವ್ಯಾಯಾಮ, ಆಟದ ಜೊತೆಗೆ ವಿದ್ಯಾಭ್ಯಾಸ ಮಾಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಹೊಂದಬೇಕು ಎಂದರು.

ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ಗ್ರಾಮೀಣ ಮಟ್ಟದಲ್ಲೇ ಕ್ರೀಡಾ ಪ್ರತಿಭೆ ಹಾಗೂ ಕೌಶಲ್ಯ ಗುರುತಿಸಿ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿದರು. ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜ್, ಕೊಡ್ಲಿಪೇಟೆ ವಿದ್ಯಾಸಂಸ್ಥೆ ನಿರ್ದೇಶಕ ಯತೀಶ್, ಶಿವಪ್ರಕಾಶ್, ಕೆಡಿಪಿ ಸದಸ್ಯ ವೇದಕುಮಾರ್, ಸಿ.ಆರ್.ಪಿ. ಎಸ್.ಎನ್. ಮುರುಳೀಧರ್, ರವೀಶ್, ಸೋಮವಾರಪೇಟೆ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆದಂ, ತಾಲೂಕು ನೌಕರರ ಸಂಘದ ನಿರ್ದೇಶಕ ಜೆ.ಡಿ. ಸುರೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್, ಮುಖ್ಯ ಶಿಕ್ಷಕ ದೇವರಾಜು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಸುಜಾತಾ, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಔರಂಗಜೇಬ್, ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಜಯಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಶಾಲಾ ಆಡಳಿತಾಧಿಕಾರಿ ಅಬ್ದುಲ್ ರಬ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ನಿರಂಜನ್, ಪಿ.ಯು. ಕಾಲೇಜು ಪ್ರಾಂಶುಪಾಲ ಸೋಮಶೇಖರಪ್ಪ, ಮುಖ್ಯ ಶಿಕ್ಷಕ ಚಂದ್ರಶೇಖರ್, ಪ್ರಮುಖರಾದ ಪ್ರವೀಣ್, ದಿನೇಶ್ ವೇದಿಕೆಯಲ್ಲಿದ್ದರು.

ಶಿಕ್ಷಕರಾದ ಕಿರಣ್ ಕುಮಾರ್, ಉಪನ್ಯಾಸಕ ಸತೀಶ್, ದೈಹಿಕ ಶಿಕ್ಷಣ ಶಿಕ್ಷಕ ಎ.ಪಿ. ಸುನೀಲ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.