ಸಿದ್ದಾಪುರ, ಸೆ. ೧೯: ಆನೆ - ಮಾನವ ಸಂಘರ್ಷವನ್ನು ತಡೆಗಟ್ಟುವ ಹಾಗೂ ಕಾಡಾನೆಗಳ ಚಲನವಲನವನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ, ಆರ್.ಆರ್.ಟಿ. ಹಾಗೂ ಆನೆ ಕಾರ್ಯಪಡೆ ಇ.ಟಿ.ಎಫ್. ತಂಡದ ಸಿಬ್ಬಂದಿಗೆ ಡ್ರೋನ್ ಕ್ಯಾಮೆರಾದ ಬಗ್ಗೆ ತರಬೇತಿ ನೀಡಲಾಯಿತು.

ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಹಾಗೂ ವೀರಾಜಪೇಟೆ ಕ್ಷೇತ್ರದ ವಿವಿಧ ಗ್ರಾಮಗಳ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಆಗಿಂದಾಗ್ಗೆ ಆನೆ - ಮಾನವ ಸಂಘರ್ಷ ನಡೆಯುತ್ತಿದೆ.

ಅಲ್ಲದೆ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿರುವುದು ಕಂಡು ಬಂದಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎ.ಎಸ್. ಪೊನ್ನಣ್ಣ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಮೇರೆಗೆ ಹಾಗೂ ಶಾಸಕ ಪೊನ್ನಣ್ಣ ಅವರು ಅರಣ್ಯ ಇಲಾಖೆಗೆ ಒಂದು ಡ್ರೋನ್ ಕ್ಯಾಮೆರಾ ನೀಡುವುದಾಗಿ ಭರವಸೆ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನುತಾ ಚವ್ಹಾಣ್ ಹಾಗೂ ಎ.ಸಿ.ಎಫ್.ತಹಸೀನ ಭಾನು ಮಾರ್ಗದರ್ಶನದಲ್ಲಿ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್ ನೇತೃತ್ವದಲ್ಲಿ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸುವ ಬಗ್ಗೆ ತರಬೇತಿ ನೀಡಲಾಯಿತು.