ಕೂಡಿಗೆ, ಸೆ. ೨೪: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಹಾಗೂ ಹಣಕಾಸು ನಿರ್ವಹಣೆಯನ್ನು ಖಂಡಿಸಿ ಸೋಮವಾರಪೇಟೆ ಮಂಡಲ ಮತ್ತು ಕುಶಾಲನಗರ ಮಂಡಲ ಬಿಜೆಪಿ ವತಿಯಿಂದ ಕುಶಾಲನಗರದ ಗಣಪತಿ ದೇವಸ್ಥಾನದ ಎದುರು ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಲಾಯಿತು.
ಇತ್ತೀಚೆಗೆ ರಾಜ್ಯದ ಹಣಕಾಸು ಇಲಾಖೆಯು ವೆಚ್ಚದಲ್ಲಿ ಮಿತವ್ಯಯ ಹಾಗೂ ಹಣಕಾಸಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ದೊಡ್ಡ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗ ಎಚ್ಚರಿಕೆ ವಹಿಸುವಂತೆ ಸರ್ಕಾರಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ವೀರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ರಾಜ್ಯ ಸರ್ಕಾರದ ಹಣಕಾಸು ನಿರ್ವಹಣೆ ಕುರಿತು ತೀವ್ರವಾಗಿ ಟೀಕಿಸಿದರು. ಸರ್ಕಾರ ಅವೈಜ್ಞಾನಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳದೆ ಹಣಕಾಸಿನ ಸ್ಥಿತಿಯನ್ನು ಪರಿಗಣಿಸಬೇಕು ಎಂದು ಇಲಾಖೆಯೇ ಎಚ್ಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ, ಬರ ನಿರ್ವಹಣೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆಯೂ ಬೋಪಯ್ಯ ಟೀಕಿಸಿದರು. ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಇದು ಒಂದು ಭಾಗವಾಗಿದ್ದು, ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಅಗತ್ಯ ಎಂದು ಒತ್ತಾಯಿಸಿದರು.
ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯ ಸರ್ಕಾರದ ಹಣಕಾಸು ನಿರ್ವಹಣೆಯನ್ನು ಟೀಕಿಸಿದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಕಸ್ತೂರಿರಂಗನ್ ವರದಿ, ವಂದೇ ಮಾತರಂ ಗಾಯನ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಸೇರಿದಂತೆ ವಿವಿಧ ವಿಚಾರಗಳಲ್ಲಿಯೂ ಸರ್ಕಾರದ ನಿಲುವನ್ನು ಪ್ರಶ್ನಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇದ್ದರೂ ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ರಸ್ತೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ಬಿಜೆಪಿ ಹೋರಾಟದ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಮಹೇಶ್ ಜೈನಿ, ಮುಖಂಡರಾದ ಚಂದ್ರಶೇಖರ್ ಹೆರೂರು, ಎಚ್.ಎಸ್. ಅಶೋಕ್, ಜಯವರ್ಧನ್, ಭಾಸ್ಕರ್ ನಾಯಕ್, ಗಣಿ ಪ್ರಸಾದ್, ಚರಣ್, ಮಧುಸೂದನ್, ಎಂ.ಡಿ. ಕೃಷ್ಣಪ್ಪ, ಕೆ. ವರದ, ಕೂಡಿಗೆ ಗಿರೀಶ್, ಅರುಣ ಕುಮಾರಿ, ಗೀತಾ ಧರ್ಮಪ್ಪ, ಪುಷ್ಪ ನಾಗೇಶ್, ಮಾವಾಜಿ ರಕ್ಷಿತ್, ಮೊಣ್ಣಪ್ಪ, ಶಿವಕುಮಾರ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಳಿಕ ಗಣಪತಿ ದೇವಸ್ಥಾನದ ಮುಂಭಾಗದ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.