ಶ್ರೀಮಂಗಲ, ಸೆ. ೨೯ : ಪೊನ್ನಂಪೇಟೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಗೀತ ಗಾಯನ ಸ್ಪರ್ಧೆ ಮತ್ತು ಪರಿಷತ್ ಸಭೆಯನ್ನು ಆಯೋಜಿಸಲಾಗಿತ್ತು.

ಪೊನ್ನಂಪೇಟೆ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೊಣಿಯಂಡ ಸಂಜು ಸೋಮಯ್ಯ, ಉಪಾಧ್ಯಕ್ಷರಾದ ನೆರೆಯಂಡಮ್ಮನ ಸುಬ್ರಮಣಿ, ಕೊಳ್ಳಿಮಾಡ ಕಾರ್ಯಪ್ಪ, ಸಾದುಲಿ, ಇಂದಿರಾ, ಮುತ್ತಮ್ಮ, ಸಹ ಕಾರ್ಯದರ್ಶಿ ಭೋಜಮ್ಮ, ತರಬೇತಿ ಆಯುಕ್ತರಾದ ಅಲಿಮಾ ಹಾಜರಿದ್ದರು.

ಗೀತ ಗಾಯನ ಸ್ಪರ್ಧೆಯಲ್ಲಿ ೧೦ ಶಾಲೆಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಸ್ಕೌಟ್ ಮತ್ತು ಗೈಡ್ಸ್ ವಿಭಾಗದಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರು.

ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಮಾತನಾಡಿ, ಸ್ಕೌಟ್ - ಗೈಡ್, ಮಕ್ಕಳಲ್ಲಿ ಶಿಸ್ತು, ಸಂಯಮ, ದೇಶಭಕ್ತಿ, ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಗೀತ ಗಾಯನದಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಪರಸ್ಪರ ಸಹಕಾರ ಮನೋಭಾವ ಬೆಳೆಯುತ್ತದೆ. ಹಾಗಾಗಿ ಎಲ್ಲರೂ ಸ್ಪರ್ಧೆಯಲ್ಲಿ ಬಹುಮಾನ ಪಡೆಯುವುದು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ ಎಂದು ತಿಳಿಸಿದರು.

ಕಾರ್ಯಕಾರಿ ಸಮಿತಿ ಅಧ್ಯಕ್ಷ ಸಂಜು ಸೋಮಯ್ಯ ಮಾತನಾಡಿ, ಎಲ್ಲ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರ ಮೂಲಕ ದೇಶಭಕ್ತಿ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಿ ಎಂದರು. ಕಾರ್ಯದರ್ಶಿ ವಾಮನ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.