ನಾಪೋಕ್ಲು, ಅ. ೨: ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಭಾಗಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಚೇಲಾವರ ಶಾಲೆಯ ಬಳಿ ಶಾಸಕರ ವಿಶೇಷ ಅನುದಾನದ ೨೫ ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸೇತುವೆಯನ್ನು ಅವರು ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳಿಸಿದರು.
ಬಳಿಕ ಗ್ರಾಮದ ಪ್ರಸಿದ್ಧ ಪೊನ್ನೋಲ ಶಾಸ್ತಾವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮ್ಮ ಶಾಸಕರ ಅನುದಾನದ ೫ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಡಿಯತ್ನಾಡ್ ಪೊನ್ನೋಲ ಶಾಸ್ತಾವು ಪುದಿಯೋದಿ ದೇವಸ್ಥಾನದ ಆವರಣ ರಸ್ತೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಇದಕ್ಕೂ ಮುನ್ನ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕರು, ೨೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭ ಸ್ಥಳೀಯ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖ ಮುಖಂಡರು ಇದ್ದರು.