ಸೋಮವಾರಪೇಟೆ, ಅ. ೨: ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಹಿರಿದಾಗಿದ್ದು, ಇವರನ್ನು ಇನ್ನಷ್ಟು ಸಬಲರನ್ನಾಗಿಸಬೇಕಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೊಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಸಬಲೀಕರಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ೬.೫ ಲಕ್ಷ ಸ್ವ ಸಹಾಯ ಗುಂಪುಗಳನ್ನು ರಚಿಸಿದ್ದು, ೫೫ ಲಕ್ಷ ಮಂದಿ ಸದಸ್ಯತ್ವ ಪಡೆದಿದ್ದಾರೆ ಎಂದ ಅವರು, ಮಹಿಳೆಯರ ಸಬಲೀಕರಣದಿಂದ ಮಾತ್ರ ಸಮಾಜದ ಸಬಲೀಕರಣ ಸಾಧ್ಯ. ಸಮಾಜ ಕಟ್ಟುವಲ್ಲಿ ಮಹಿಳೆಯರು ಮಂಚೂಣಿಯಲ್ಲಿದ್ದು, ಇವರು ತಮ್ಮ ಆರೋಗ್ಯದತ್ತಲೂ ಗಮನ ಹರಿಸಿ, ಪೌಷ್ಟಿಕ ಆಹಾರವನ್ನು ಸೇವಿಸಬೇಕಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಸಂಸ್ಕಾರ ನೀಡಿ, ಸಮಾಜದ ಆಸ್ತಿಯನ್ನಾಗಿ ಮಾಡಬೇಕೆಂದರು.
ಜಿಲ್ಲಾ ಜನಜಾಗೃತಿ ಸಮಿತಿ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು, ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಪುರುಷರಿಗೆ ಸರಿಸಮಾನರಾಗಿ ಜೀವನ ನಡೆಸುತ್ತಿರುವ ಮಹಿಳೆಯರು ಎಲ್ಲಾ ರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಮಹಿಳೆಯರು ಕುಟುಂಬದ ಅಡಿಪಾಯವಾಗಿದ್ದು, ತಮ್ಮ ಮಕ್ಕಳನ್ನು ಸಂಸ್ಕಾರವAತರನ್ನಾಗಿ ಮಾಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಭರತ್ ಮಾತನಾಡಿ, ಮಹಿಳೆ ಕುಟುಂಬದ ಸಂರಕ್ಷಣೆಗಾಗಿ ತನ್ನ ಜೀವನವನ್ನು ಸವೆಸುತ್ತಿದ್ದಾಳೆ. ಕಾಲ ಬದಲಾಗಿದೆ; ಆದರೆ, ವ್ಯವಸ್ಥೆ ಹಿಂದಿನAತೆಯೇ ಮುಂದುವರೆದಿದೆ ಎಂದು ವಿಷಾದಿಸಿದರು.
ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ಕಿರಣ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ವಿಠಲ್ ಸಾಲ್ಯಾನ್, ಜನಜಾಗೃತಿ ಸದಸ್ಯರಾದ ಸೋಮೇಶ್, ಸುರೇಶ್ ಹಾಗೂ ಸಂಯುಕ್ತ ಇದ್ದರು.