ಮಡಿಕೇರಿ, ಅ. ೩: ಎಸ್ಐಆರ್ ಪ್ರಕ್ರಿಯೆಯಡಿ ನಮೂನೆ-೭ ಅನ್ನು ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಿಜೆಪಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾನೂನುಬಾಹಿರ ಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಬ್ಯಾಡಗೊಟ್ಟದಲ್ಲಿ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ನಮೂನೆ-೭ರ ದುರ್ಬಳಕೆ ನಡೆದಿರುವುದು ಬೆಳಕಿಗೆ ಬಂದಿದ್ದು, ೬೩ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆದಿದೆ. ಬಿಜೆಪಿ ಕಚೇರಿಯಿಂದಲೇ ಅರ್ಜಿ ಸಲ್ಲಿಕೆಯಾಗಿರುವುದು ಬೆಳಕಿಗೆ ಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದರು.
ನೋಟಿಸ್ ಜಾರಿಗೊಳಿಸಿದ ಬಳಿಕ ನಡೆದ ಪ್ರಕ್ರಿಯೆಯಿಂದ ಸದ್ಯ ಗೊಂದಲ ಬಗೆಹರಿದಿದ್ದರೂ, ಈ ರೀತಿಯ ಪ್ರಯತ್ನ ನಡೆದಿರುವುದು ಖಂಡನೀಯ. ಈ ಕುರಿತು ತನಿಖಾ ಸಮಿತಿ ರಚಿಸಿ, ಕೂಲಂಕಷ ತನಿಖೆ ನಡೆಸಬೇಕು. ತಪ್ಪಿತಸ್ಥರು ಕಂಡುಬAದಲ್ಲಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರಸಭಾ ಸದಸ್ಯ, ಜಿಲ್ಲಾ ಕಾರ್ಯದರ್ಶಿ ಬಶೀರ್ ಮಾತನಾಡಿ, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತ ಮತದಾರರ ಮತಗಳನ್ನು ಕಸಿಯುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.
ಬಳಿಕ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಅಲಿ, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕಾರ್, ನಗರಸಭಾ ಸದಸ್ಯೆ ಮೇರಿ ವೇಗಸ್, ಹೋರಾಟಗಾರರಾದ ಮೊಣ್ಣಪ್ಪ, ಮಹೇಶ್, ವುಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷೆ ರಿಶಾನ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.