ವೀರಾಜಪೇಟೆ: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೭ನೇ ಜನ್ಮದಿನಾಚರಣೆಯನ್ನು ವೀರಾಜಪೇಟೆ ಪುರಸಭೆ ಕಚೇರಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವೀರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿಗಳಾದ ಪಟ್ಟಚೆರವಂಡ ಕೆ. ನಾಚಪ್ಪ ಅವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ನಂತರ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಾಧಿಕಾರಿಗಳು, ಗಾಂಧೀಜಿಯವರ ಬದುಕು ಮತ್ತು ಹೋರಾಟದ ಹಿನ್ನೆಲೆಯನ್ನು ಸ್ಮರಿಸಿದರು. ಗಾಂಧೀಜಿಯವರ ಕನಸಿನ 'ಸ್ವಚ್ಛ ಭಾರತ' ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕನೂ ಕೈಜೋಡಿಸಬೇಕು ಎಂದು ಕರೆ ನೀಡಿದ ಅವರು, "ಸ್ವಚ್ಛತೆಯು ಕೇವಲ ಸರಕಾರದ ಜವಾಬ್ದಾರಿಯಲ್ಲ, ಅದೊಂದು ಸಾಮಾಜಿಕ ಸ್ವಾಸ್ಥ÷್ಯದ ಸಂಕೇತ. ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ರೋಗಮುಕ್ತ ಸಮಾಜವನ್ನು ಸೃಷ್ಟಿಸಬಹುದು" ಎಂದು ಹೇಳಿದರು.
ಕಾರ್ಯಕ್ರಮದ ಬಳಿಕ ಪುರಸಭೆ ವತಿಯಿಂದ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ ಗಾಂಧೀಜಿಯವರ 'ಸ್ವಚ್ಛತೆ ಸೇವಾ' ಸಂದೇಶವನ್ನು ಅಚ್ಚುಕಟ್ಟಾಗಿ ಜಾರಿಗೆ ತಂದರು. ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕಿ ಕೋಮಲ, ಪರಿಸರ ಅಭಿಯಂತರರಾದ ರೀತು ಸಿಂಗ್, ಪುರಸಭೆಯ ಸಿಬ್ಬಂದಿಗಳಾದ ರಜನಿ ವೇಲುಮುರುಗನ್, ಇರ್ಫಾನ್, ಐವಾನ್, ಮುರಳಿ, ಸಮರ್ಪಕ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಸೇರಿದಂತೆ ಪುರಸಭೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.