ಮಡಿಕೇರಿ, ಅ. ೩: ಈ ಬಾರಿ ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇAದ್ರ ಸ್ವಾಮಿ ಹೇಳಿದರು.
ವೀರಾಜಪೇಟೆ ತಾಲೂಕು ಆಡಳಿತದ ವತಿಯಿಂದ ವೀರಾಜಪೇಟೆ ಬಳಿಯ ಬಿಟ್ಟಂಗಾಲ ಕೂರ್ಗ್ ಯತ್ನಿಕ್ ಹಾಲ್‌ನಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ. ಇದರಿಂದಾಗಿ ಆಹಾರ ಉತ್ಪಾದನೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ, ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಮತ್ತಿತರ ಪರಿಣಾಮ ಎದುರಿಸಬೇಕಾಗುತ್ತದೆ.
ಮುಂದಿನ ದಿನಗಳಲ್ಲಿ ಮೂರರಿಂದ ಆರು ಡಿಗ್ರಿ ಸೆಂಟಿಗ್ರೇಡ್ ನಷ್ಟು ಬಿಸಿಲಿನ ಪ್ರಖರತೆ ಹೆಚ್ಚಾಗಲಿದೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಕಿವಿಮಾತು ಹೇಳಿದರು.
ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಲಿದೆ. ಸೈಕ್ಲೋನ್ ಪರಿಣಾಮದಿಂದ ಅಲ್ಪಸ್ವಲ್ಪ ಮಳೆ ಆಗಬಹುದು. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕೃಷಿ ಸಚಿವರ ಸಮ್ಮೇಳನದಲ್ಲಿ ಈ ಮಾಹಿತಿ ದೊರೆತಿದೆ ಎಂದು ಸಚಿವರು ತಿಳಿಸಿದರು.
ಕೊಡಗು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಿಸಲಾಗುವುದು. ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ಪ್ರಜಾಸೇವಾ ಅಭಿಯಾನ ಆಯೋಜಿಸಿದ್ದು, ತಾಲೂಕು, ಹೋಬಳಿ, ಗ್ರಾ.ಪಂ.ಮಟ್ಟದಲ್ಲಿಯೂ ಸಭೆ ನಡೆಸಿ ಪರಿಹಾರ ಒದಗಿಸಲು ಮುಂದಾಗಲಾಗಿದೆ ಎಂದು ಸಚಿವರಾದ ಪಿ.ಎಂ.ನರೇAದ್ರ ಸ್ವಾಮಿ ಹೇಳಿದರು. ಸರ್ಕಾರ ಗ್ಯಾರಂಟಿ ಯೋಜನೆ ಜೊತೆಗೆ ಹಲವು ಕಾರ್ಯಕ್ರಮ ನೀಡುತ್ತಿದೆ. ಪಾರದರ್ಶಕ ಆಡಳಿತ ನೀಡಲು ಸರ್ಕಾರ ಮುಂದಾಗಿದೆ.
ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಕೃಷಿ ಯಂತ್ರೋಪಕರಣ ಬದಲಾಗಿ, ೩ ಎಕರೆ ಒಳಗೆ ಇರುವ ಭೂಮಿಯನ್ನು ಸರ್ಕಾರವೇ ಉಳುಮೆ ಮಾಡಲಿದೆ. ಕುಡಿಯುವ ನೀರು ಪೂರೈಕೆಗಾಗಿ ಸರ್ಕಾರ ವಿಧಾನಸಭಾ ಕ್ಷೇತ್ರವಾರು ೨ ಕೋಟಿ ರೂ. ಬಿಡುಗಡೆ ಮಾಡಿದ್ದು, ಪ್ರತಿ ತಾಲೂಕಿಗೆ ತಲಾ ೧ ಕೋಟಿ ರೂ ಬಿಡುಗಡೆಗೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗುವುದು ಎಂದು ಸಚಿವÀ ಪಿ.ಎಂ.ನರೇAದ್ರ ಸ್ವಾಮಿ ಹೇಳಿದರು.
ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಬಗ್ಗೆ ಹೆಚ್ಚಿನ ಮನವಿ ಸಲ್ಲಿಕೆಯಾಗುತ್ತಿದ್ದು, ಜಿಲ್ಲೆಯಲ್ಲಿ ತಾಲೂಕಿನ ವಿಸ್ತೀರ್ಣ ದೊಡ್ಡದಿರುವುದರಿಂದ ಪ್ರತಿ ತಾಲೂಕಿಗೆ ೪ಏಳನೇ ಪುಟಕ್ಕೆ
೪ಏಳನೇ ಪುಟಕ್ಕೆ ತಲಾ ಒಂದು ಕೋಟಿ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸಚಿವರು ಸಲಹೆ ನೀಡಿದರು.
ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಮಾತನಾಡಿ ಸರ್ಕಾರ ಪ್ರಜಾಸೇವಾ ಆಂದೋಲನವನ್ನು ವಿವಿಧ ಹಂತದಲ್ಲಿ ಆಯೋಜಿಸಿದ್ದು, ಅಧಿಕಾರಿಗಳು ಬದ್ಧತೆ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಆಡಳಿತ ನಡೆಸಬೇಕು ಎಂದು ಸಲಹೆ ನೀಡಿದರು. ಸರ್ಕಾರ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಸಲಹೆ ನೀಡಿದರು.
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ಜಾನ್ಸನ್, ಬಗರ್ ಹುಕುಂ ಸಮಿತಿ ಅಧ್ಯಕ್ಷÀ ಅಬ್ದುಲ್ ಸಲಾಂ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್, ತಹಶಿಲ್ದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸೆಸ್ಕ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಆಹಾರ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಮಳಿಗೆ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು, ಸಚಿವರು ಮಾಹಿತಿ ಮಳಿಗೆ ವೀಕ್ಷಿಸಿದರು ಸಾರ್ವಜನಿಕರಿಂದ ೧೦೧ ಅರ್ಜಿಗಳು ಸಲ್ಲಿಕೆಯಾದವು.