ಮಡಿಕೇರಿ, ಅ. ೩: ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಹೃದಯ ದಿನ ಆಚರಣೆ ನಡೆಯಿತು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಸನತ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಪ್ರತಿವರ್ಷ ಸೆಪ್ಟೆಂಬರ್ ೨೯ ರಂದು ವಿಶ್ವ ಹೃದಯ ದಿನ ಆಚರಿಸಲಾಗುತ್ತಿದೆ. ಹೃದಯ ರಕ್ತನಾಳದ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳುವ ಜೀವನ ಶೈಲಿಯನ್ನು ಉತ್ತೇಜಿಸುವುದು ಮತ್ತು ಹೃದಯಾಘಾತ ಹಾಗೂ ಪಾರ್ಶ್ವವಾಯುವಿನಂತಹ ಸಮಸ್ಯೆಗಳನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು.
ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುನಿಲ್ ಮಾತನಾಡಿ, ಹೃದಯ ಕಾಯಿಲೆಗಳ ಬಗ್ಗೆ ಜಾಗೃತಿ ಇರಬೇಕು. ಹೃದಯರೋಗಗಳ ಅಪಾಯ, ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು ಜನರಿಗೆ ಹೆಚ್ಚಿನ ಮಾಹಿತಿ ನೀಡುವುದು ಒಳ್ಳೆಯದು ಎಂದರು.
ನಿಯಮಿತ ದೈಹಿಕ ಚಟುವಟಿಕೆ ಹೃದಯದ ಆರೋಗ್ಯಕ್ಕೆ ಸಹಕಾರಿ ಧೂಮಪಾನ ಹಾಗೂ ತಂಬಾಕು ಸೇವನೆ ಹೃದಯರೋಗದ ಅಪಾಯವನ್ನು ಹೆಚ್ಚಿಸುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅರುಣ್ ಕುಮಾರ್, ಡಾ. ವಿಜಯ್ ಕುಮಾರ್ ಮೂರ್ನಾಡು, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೆ.ಆರ್. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಶ್ರೀನಾಥ್, ಸುಮತಿ, ನಿಲಿಮ್, ಶಾಲಿನಿ, ಕಿಶೋರ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಮೇಲ್ವಿಚಾರಕರು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಹಾಜರಿದ್ದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್. ಪಾಲಾಕ್ಷ ಸ್ವಾಗತಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಈ ಸಂದರ್ಭ ಕರಪತ್ರ ವಿತರಿಸಲಾಯಿತು.