ಕೂಡಿಗೆ, ಅ. ೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹೆಬ್ಬಾಲೆ ಇವರ ಸಂಯುಕ್ತಾಶ್ರಯದಲ್ಲಿ ಪೋಷಣ್ ಅಭಿಯಾನ ಮತ್ತು ಸೀಮಂತ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕುಮಾರ್ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ಹೆಬ್ಬಾಲೆ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಲತಾ ಕುಮಾರಿ ಮಗುವಿನ ಆರೈಕೆ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕಿ ಶೈಲಜಾ ಮಾದಕ ವಸ್ತುಗಳ ಬಳಕೆಯಿಂದ ಆಗುವ ತೊಂದರೆ ಬಗ್ಗೆ ವಿವರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಮತಾ ಗೃಹಲಕ್ಷ್ಮಿ, ಮಾತೃವಂದನಾ ಕುರಿತು ಮಾಹಿತಿ ನೀಡಿದರು. ಆರೋಗ್ಯ ನಿರೀಕ್ಷಕ ಸಂಜಯ್ ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಅಂಗನವಾಡಿ ಕೇಂದ್ರದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು. ೪ ಗರ್ಭಿಣಿ ಮಹಿಳೆಯರಿಗೆ ಸೀಮಂತ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ಬಾಲೆಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ, ಹೆಬ್ಬಾಲೆ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆಯರಾದ ವನಜಾಕ್ಷಿ ಮತ್ತು ಸುಧಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.