ಮಡಿಕೇರಿ, ಅ. ೧೨: ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಮಿತಿಮೀರಿ ಧ್ವನಿವರ್ಧಕಗಳನ್ನು ಬಳಸಿ ನಿಯಮ ಉಲ್ಲಂಘಿಸಲಾಗುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ವಕೀಲ ಅಮೃತೇಶ್ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಠಾಣಾಧಿಕಾರಿ ಹಾಗೂ ಪರಿಸರಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿಯಾದ ಅಮೃತೇಶ್, ದಸರಾ ಆಚರಣೆಗೆ ತಮ್ಮ ವಿರೋಧವಿಲ್ಲ. ಆದರೆ, ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಧ್ವನಿವರ್ಧಕಗಳನ್ನು ಬಳಸುವುದರಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟಾಗುತ್ತಿದೆ. ವಿಶೇಷವಾಗಿ ರೋಗಿಗಳು ಮತ್ತು ವೃದ್ಧರು ತೊಂದರೆ ಅನುಭವಿಸುವಂತಾಗಿದ್ದು, ಕೆಲವರು ಊರು ತೊರೆಯುವ ಪರಿಸ್ಥಿತಿಯೂ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜೆ ಹಾವಳಿಯಿಂದ ಹಲವು ದುಷ್ಪರಿಣಾಮಗಳು ಉಂಟಾಗುತ್ತವೆ. ನ್ಯಾಯಾಲಯದ ಆದೇಶವಿದ್ದರೂ ಧ್ವನಿವರ್ಧಕಗಳನ್ನು ಮಿತಿಮೀರಿ ಬಳಸಲಾಗುತ್ತಿದೆ. ಇದರ ವಿರುದ್ಧ ೨೦೨೩ರಿಂದಲೂ ನ್ಯಾಯಾಂಗ ಹೋರಾಟ ನಡೆಸಲಾಗುತ್ತಿದೆ. ಇದೀಗ ದಶಮಂಟಪ ಸಮಿತಿಯು ಒಂದು ದಿನ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂದು ನ್ಯಾಯಾಲಯದ ಮೊರೆ ಹೋಗಿರುವುದು ಎಷ್ಟು ನ್ಯಾಯಸಮ್ಮತ ಎಂದು ಪ್ರಶ್ನಿಸಿದರು.

ಈ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲಾಗಿದೆ. ಕಾನೂನಿನ ಪ್ರಕಾರ ರಾತ್ರಿ ೧೦ ಗಂಟೆಯವರೆಗೆ ಧ್ವನಿವರ್ಧಕ ಬಳಸಲು ಯಾವುದೇ ಅಭ್ಯಂತರವಿಲ್ಲ. ಆದರೆ, ನಿಗದಿತ ನಿಯಮಗಳನ್ನು ಮೀರಿ ಬಳಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಹಿಂದೆ ಮಂಟಪವೊAದು ಕಳಚಿಬಿದ್ದ ಘಟನೆ ಹಾಗೂ ವೀರಾಜಪೇಟೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆ ಆತಂಕಕಾರಿ ಬೆಳವಣಿಗೆಗಳಾಗಿವೆ. ಹೀಗಾಗಿ, ಇಂತಹ ಕಾರ್ಯಕ್ರಮಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಮಂಟಪಗಳಲ್ಲಿ ಅಳವಡಿಸುವ ಲೇಸರ್ ದೀಪಗಳು ಕಣ್ಣಿನ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಪುಣೆಯಲ್ಲಿ ಲೇಸರ್ ಬೆಳಕಿನಿಂದ ೧೫೦ ಮಂದಿ ಕಣ್ಣು ಕಳೆದುಕೊಂಡಿದ್ದಾರೆ ಎಂದು ಉಲ್ಲೇಖಿಸಿದ ಅವರು, ಮಡಿಕೇರಿ ದಸರಾ ಮಂಟಪಗಳಲ್ಲಿಯೂ ಲೇಸರ್ ಬಳಕೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.