ಚೆಯ್ಯಂಡಾಣೆ, ಅ. ೧೨: ನಾಪೋಕ್ಲು ಸಮೀಪದ ಹಳೇತಾಲೂಕು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳ ದಾನಿಗಳು ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಮಟ್ಟದ ಉಪನಿರ್ದೇಶಕಿ ಸುಮಂಗಲ ಜಿ. ಹಿರೇಮನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪೋಷಣ್ ಅಭಿಯಾನದ ಉದ್ದೇಶ ಹಾಗೂ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು.
ನಿರೂಪಣಾಧಿಕಾರಿ ಪ್ರಸನ್ನ ಕುಮಾರ್ ಮಾತನಾಡಿ, ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟುವುದರ ಜೊತೆಗೆ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಪೋಷಣ್ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಡಿ.ಹೆಚ್. ಮಾತನಾಡಿ, ಪೋಷಣ್ ಮಾಸಾಚರಣೆಯನ್ನು ೨೦೧೮ ರಿಂದ ಆಚರಿಸಲಾಗುತ್ತಿದ್ದು, ಆರೋಗ್ಯಕರ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಕೋ-ಆಪರೇಟಿವ್ ಮಹಿಳಾ ಸಮಾಜದ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಯಪ್ಪ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಆರಫಾತ್, ಆರೋಗ್ಯ ಇಲಾಖೆಯ ವೇದಾವತಿ ಹಾಗೂ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸೋನಿ ಮಾತನಾಡಿದರು.
ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಪೋಷಣ್ ಅಭಿನಂದನಾ ಪತ್ರಗಳನ್ನು ಗಣ್ಯರು ವಿತರಿಸಿದರು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವೂ ನಡೆಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು, ಸಂಘದ ಸದಸ್ಯರು, ತಾಯಂದಿರು, ಭಗವತಿ ಮಹಿಳಾ ಸಮಾಜದ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷಿö್ಮ ಸ್ವಾಗತಿಸಿದರು. ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶೀಲಾ ಅಶೋಕ್ ವಂದಿಸಿದರು.