ಮಡಿಕೇರಿ, ಅ. ೧೨: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಂಧನವಾಗಬೇಕು ಹಾಗೂ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಧನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹಳೇ ಖಾಸಗಿ ಬಸ್ ನಿಲ್ದಾಣ ತನಕ ಮೆರವಣಿಗೆ ಸಾಗಿ ಕೇಂದ್ರ ಸರಕಾರ, ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಎಸ್‌ಐಆರ್ ಪ್ರಕ್ರಿಯೆಯಿಂದ ಗೊಂದಲ ಸೃಷ್ಟಿಯಾಗುತ್ತಿದ್ದು, ನೈಜ ಮತದಾರರಿಗೆ ಅನ್ಯಾಯವಾಗುವ ಆತಂಕವಿದೆ. ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ನಿರಂತರ ಹೋರಾಟ ನಡೆಸುತ್ತಿವೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ದೆಹಲಿಯಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದ್ದು, ಯುವಜನತೆ ಈ ಹೋರಾಟದಲ್ಲಿ ಒಂದಾಗುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆದಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿರುವುದು ಬಹಿರಂಗವಾಗುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಪ್ರಕ್ರಿಯೆಗೆ ಸಹಕರಿಸುತ್ತಿದ್ದರೂ ಅಕ್ರಮಗಳು ನಡೆಯುತ್ತಿವೆ ಎಂಬುದು ಆತಂಕಕಾರಿ ಸಂಗತಿಯಾಗಿದೆ. ಆದ್ದರಿಂದ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ನೈಜ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ೧೩ ಕೋಟಿ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ರಾಜಕೀಯ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು. ಮತದಾನದ ಹಕ್ಕು ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಪಾಲ್ಗೊಳ್ಳುವಿಕೆಯೇ ಪ್ರಶ್ನಾರ್ಹವಾಗುತ್ತದೆ ಎಂದರು.

ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿದ ಅವರು, ಮತದಾರರ ಹಕ್ಕುಗಳ ರಕ್ಷಣೆಗಾಗಿ ಧ್ವನಿ ಎತ್ತುವವರ ವಿರುದ್ಧ ಕ್ರಮ ಕೈಗೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸರ್ಕಾರದ ಕೈಗೊಂಬೆಯAತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಸೂರಜ್ ಹೊಸೂರು, ಜಿಲ್ಲಾ ವಕ್ತಾರ ತೆನ್ನಿರ ಮೈನಾ, ನಗರಸಭೆ ನಾಮನಿರ್ದೇಶಿತ ಸದಸ್ಯ ಮಂಡಿರ ಸದಾ ಮುದ್ದಪ್ಪ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಿಲ್ಲಾ ಉಪಾಧ್ಯಕ್ಷ ಸುಜಾ ತಿಮ್ಮಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಡಿಕೇರಿ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಮುಖರಾದ ಅಪ್ರು ರವೀಂದ್ರ, ಮುಕ್ಕಾಟಿರ ಸಂದೀಪ್, ಇಸ್ಮಾಯಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.