ಮಡಿಕೇರಿ, ಅ. ೧೩: ಕರ್ನಾಟಕ ಲೇಖಕಿಯರ ಸಂಘದ ಕೊಡಗು ಜಿಲ್ಲಾ ಶಾಖೆ ಮತ್ತು ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಹಯೋಗದಲ್ಲಿ ತಾ.೧೪ ರಂದು (ಇಂದು) ಪುಸ್ತಕ ಶ್ರೀ ಪ್ರಶಸ್ತಿ ಪ್ರದಾನ, ಪುಸ್ತಕ ವಿಮರ್ಶೆ ಹಾಗೂ ಗೀತ ಗಾಯನ ಕಾರ್ಯಕ್ರಮ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ ೧೦:೩೦ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷೆ ವಿಜಯ ವಿಷ್ಣು ಭಟ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಸುನಂದಮ್ಮ ನೆರವೇರಿಸಲಿದ್ದಾರೆ. ಸಂಘದ ಜಿಲ್ಲಾ ಶಾಖೆಯ ಉಪಾಧ್ಯಕ್ಷೆ ಉಳುವಂಗಡ ಕಾವೇರಿ ಉದಯ ಅವರು ಪ್ರಸ್ತಾವಿಕ ನುಡಿ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಿ ಕಾವೇರಪ್ಪ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಪಿ ರೇಖಾ ಭಾಗವಹಿಸಲಿದ್ದಾರೆ. ಈ ಸಂದರ್ಭ 'ಪುಸ್ತಕ ಶ್ರೀ' ಪ್ರಶಸ್ತಿ ಪುರಸ್ಕೃತರಾದ ಕಟ್ರತನ ಲಲಿತಾ ಅಯ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.