ಸೋಮವಾರಪೇಟೆ, ಅ. ೨೨: ತಾಲೂಕಿನ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರಕ್ಕೆ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಿಂದಲೇ ಸಮಯಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಗೃತ ಮನೋಭಾವವನ್ನು ಬೆಳೆಸಿಕೊಂಡು ನಮ್ಮ ಸುತ್ತಮುತ್ತಲಿನ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನ ಪಡಬೇಕು ಎಂದರು.
ನಿವೃತ್ತ ಡಿ. ಸಿ. ಪಿ. ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ದೃಢ ಸಂಕಲ್ಪದಿAದ ನಿರಂತರ ಅಧ್ಯಯನ ನಡೆಸಿದರೆ ಭವಿಷ್ಯದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.
ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಎಂ. ಭರತ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕಲಿಕೆಯೊಂದಿಗೆ ಉತ್ತಮ ಸಾಧಕರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಯಕತ್ವ, ಸಂಸ್ಕಾರ ಹಾಗೂ ಸೇವಾ ಮನೋಭಾವನೆ ಬೆಳೆಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕೆಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲ ಸಿ.ಜಿ. ಮಂದಪ್ಪ ಅವರು ಎನ್ಎಸ್ಎಸ್ ಯೋಜನೆಯ ಧ್ಯೇಯೋದ್ದೇಶಗಳನ್ನು ತಿಳಿಸಿದರು. ಶಿಬಿರಾಧಿಕಾರಿ ಮನೋಹರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು.
ಉಪನ್ಯಾಸಕ ರಾಜ ಸುಂದರA ವಂದಿಸಿದರು. ಕಾರ್ಯಕ್ರಮದಲ್ಲಿ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಬಿ.ಎ. ಕರುಂಬಯ್ಯ, ಉಪನ್ಯಾಸಕ ಮೋಹನ್ ಹೆಗ್ಡೆ, ಸೀಮಾ ಕೆ.ಕೆ., ಪ್ರಫುಲ್ಲ ಕುಮಾರಿ ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.