ವೀರಾಜಪೇಟೆ, ಅ. ೨೩: ವೀರಾಜಪೇಟೆಯ ತೆಲುಗರ ಬೀದಿಯಲ್ಲಿ ರುವ ಇತಿಹಾಸ ಪ್ರಸಿದ್ಧ ಶ್ರೀ ಅಂಗಳ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಒಂಭತ್ತು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.
ಪೂಜೋತ್ಸವದ ಅಂಗವಾಗಿ ಪ್ರತಿದಿನ ಬೆಳಿಗ್ಗೆ ಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ-ಪುನಸ್ಕಾರಗಳು, ಶ್ರೀ ದೇವಿಗೆ ವಿಶೇಷ ಅಭಿಷೇಕ ಪೂಜೆ ಹಾಗೂ ವಿವಿಧ ವೈವಿಧ್ಯಮಯ ಅಲಂಕಾರ ಪೂಜೆಗಳು ನೆರವೇರಿದವು. ಪ್ರತಿದಿನ ಸಂಜೆ ದೇವಿಯ ಅಲಂಕಾರ ಮತ್ತು ಆರಾದನೆ, ಭಜನೆ ಹಾಗೂ ವಿಶೆಷ ಪೂಜೆಗಳು, ಮಹಾಪೂಜೆ ನಡೆದು, ಮಹಾಮಂಗಳಾರತಿ ನೆರವೇರಿಸಲಾಯಿತು.
ಬಳಿಕ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರತಿದಿನ ಪ್ರಸಾದ ವಿನಿಯೋಗ ಹಾಗೂ ಭೋಜನ ವ್ಯವಸ್ಥೆ ಮಾಡಲಾಯಿತು. ಈ ಧಾರ್ಮಿಕ ಮಹೋತ್ಸವದಲ್ಲಿ ವೀರಾಜಪೇಟೆ ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಸಂಖ್ಯೆಯ ಭಕ್ತಾದಿಗಳು ಭಾಗವಹಿಸಿ ಶ್ರೀ ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.