ವೀರಾಜಪೇಟೆ, ಅ. ೨೫: ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಹೆಚ್ಚಿಸುವಲ್ಲಿ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ‍್ಯ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಜ್ಞಾನವಿಕಾಸ ಕಾರ್ಯಕ್ರಮದಡಿ ವೀರಾಜಪೇಟೆಯ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಅವರು, ಮಹಿಳೆಯರು ಸಂಘಟಿತರಾಗಿ ಅಭಿವೃದ್ಧಿಯತ್ತ ಸಾಗಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ವಾಣಿಶ್ರೀ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳಬೇಕು. ಮಹಿಳೆಯರ ತ್ಯಾಗಮಯ ಜೀವನದ ಮಹತ್ವವನ್ನು ಅರಿತುಕೊಳ್ಳುವುದರೊಂದಿಗೆ ಮಕ್ಕಳನ್ನು ತಪ್ಪು ದಾರಿಗೆ ಹೋಗದಂತೆ ಉತ್ತಮ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿಯನ್ನು ಪೋಷಕರು ನಿರ್ವಹಿಸಬೇಕು ಎಂದರು.

ಮಡಿಕೇರಿಯ ಜಿಲ್ಲಾ ಪೊಲೀಸ್ ಕಚೇರಿಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಪೊಲೀಸ್ ಉಪನಿರೀಕ್ಷಕಿ ಸುಮತಿ ಅವರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಮಹಿಳೆಯರಿಗೆ ಉಪಯುಕ್ತ ಸಲಹೆಗಳನ್ನು ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಪೊನ್ನಂಪೇಟೆ ಸಿಐಟಿಯು ಕಾಲೇಜಿನ ಕನ್ನಡ ಉಪನ್ಯಾಸಕಿ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಡಾ. ಸುಶ್ಮಿತಾ ಪಿ.ವಿ. ಅವರು ‘ಸ್ವಾವಲಂಬಿ ಬದುಕಿನ ನಿರ್ವಹಣೆಯಲ್ಲಿ ಸ್ವಉದ್ಯೋಗದ ಪಾತ್ರ’ ವಿಷಯದ ಕುರಿತು ಉಪನ್ಯಾಸ ನೀಡಿದರು. ಮಹಿಳೆಯರು ಸುಲಭವಾಗಿ ಆರಂಭಿಸಬಹುದಾದ ಸ್ವಉದ್ಯೋಗಗಳು ಹಾಗೂ ಅವುಗಳನ್ನು ಕಾರ್ಯರೂಪಕ್ಕೆ ತರುವ ವಿಧಾನಗಳ ಕುರಿತು ಮಾಹಿತಿ ನೀಡಿದರು.

ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ರಂಗೋಲಿ ಹಾಗೂ ಪುಷ್ಪಗುಚ್ಛ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜ್ಞಾನ ನಿಧಿ ಶಿಷ್ಯವೇತನದ ಫಲಾನುಭವಿ ಮಕ್ಕಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವೇದಿಕೆಯಲ್ಲಿ ತಾಲೂಕು ಯೋಜನಾಧಿಕಾರಿ ಹರೀಶ್ ಪಿ. ಹಾಗೂ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಉಷಾರಾಣಿ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರಾದ ಧನೇಶ್, ವಸಂತ್, ಶಿವಕುಮಾರ್, ಗೀತಾ, ಪುಷ್ಪಲತಾ, ಪ್ರತಾಪ್ ಸೇರಿದಂತೆ ಜ್ಞಾನವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.