ಕೊಡ್ಲಿಪೇಟೆ, ಅ. ೨೭: ರೋಟರಿ ಹೇಮಾವತಿ ಕೊಡ್ಲಿಪೇಟೆ ವತಿಯಿಂದ ಸ್ಥಳೀಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಅವರು, ರೋಟರಿ ಹೇಮಾವತಿ ಸಂಸ್ಥೆಯು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬೃಹತ್ ಆರೋಗ್ಯ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದರು.
ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿಕೊಳ್ಳಬೇಕು. ಯಾವುದೇ ಮುಜುಗರ ಅಥವಾ ಸಂಕೋಚವಿಲ್ಲದೆ ವೈದ್ಯರೊಂದಿಗೆ ತಮ್ಮ ಆರೋಗ್ಯ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ರೋಟರಿ ಅಸಿಸ್ಟೆಂಟ್ ಗವರ್ನರ್ ವಸಂತ್ ಕುಮಾರ್ ಮಾತನಾಡಿ, ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ರೋಟರಿ ಜಿಲ್ಲಾ ಸದಸ್ಯ ಡಾ. ಉದಯ್ ಕುಮಾರ್ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಆಯೋಜಿಸಿರುವ ಇಂತಹ ಆರೋಗ್ಯ ಶಿಬಿರಗಳು ಜನಸಾಮಾನ್ಯರಿಗೆ ಅತ್ಯಂತ ಪ್ರಯೋಜನಕಾರಿಯಾಗಿವೆ. ಎಂದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಸ್ಥಳೀಯ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ ವಹಿಸಿದ್ದರು. ರೋಟರಿ ಹೇಮಾವತಿ ಅಧ್ಯಕ್ಷ ಭಾನುಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ಮೋಹನ್ ಕುಮಾರ್, ಹಿರಿಯ ರೊಟೇರಿಯನ್ ಹೆಚ್.ಎಂ. ದಿವಾಕರ್ ಕಾರ್ಯಕ್ರಮ ನಿರ್ವಹಿಸಿದರು.
ಶಿಬಿರದಲ್ಲಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಧನಿಕಾ, ಪುಣ್ಯ ಆಸ್ಪತ್ರೆಯ ವೈದ್ಯರುಗಳಾದ ಡಾ. ಮಹೇಶ್, ಡಾ. ನಂದನ್, ಡಾ. ಐಶ್ವರ್ಯ, ಡಾ. ಸ್ಪೂರ್ತಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆಗಳನ್ನು ನೀಡಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಯಿತು. ಅಗತ್ಯವಿರುವವರಿಗೆ ಕನ್ನಡಕಗಳನ್ನು ವಿತರಿಸಲಾಯಿತು. ೨೦ ಮಂದಿ ದಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಜೀವ ಸಂಜೀವಿನಿ ಬ್ಲಡ್ ಬ್ಯಾಂಕ್ ರಕ್ತ ಸಂಗ್ರಹಿಸುವ ಕಾರ್ಯ ನಿರ್ವಹಿಸಿತು. ರೋಟರಿ ಹೇಮಾವತಿ ಸಂಸ್ಥೆಯು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆಯೋಜಿಸಿದ ಉಚಿತ ಆರೋಗ್ಯ ಶಿಬಿರದಲ್ಲಿ ನೂರಾರು ಮಂದಿ ಭಾಗವಹಿಸಿ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆ ಪಡೆದುಕೊಂಡರು.