ಪೊನ್ನಂಪೇಟೆ, ನ. ೩: ಪೊನ್ನಂಪೇಟೆ ತಾಲೂಕಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆದಿವಾಸಿ ಸಮುದಾಯದ ನಿವೇಶನ ರಹಿತರಿಗೆ ಉಚಿತ ನಿವೇಶನ ಹಾಗೂ ಭೂರಹಿತರಿಗೆ ಸರ್ಕಾರಿ ಭೂಮಿ ಮಂಜೂರು ಮಾಡ ಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ಕೊಡಗು ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುತ್ತಾ ಶ್ರೀ ರಾಮಕೃಷ್ಣ ಶಾರದಾಶ್ರಮದಿಂದ ಪ್ರತಿಭಟನಾ ಜಾಥಾ ನಡೆಸಿ, ಕಂದಾಯ ಇಲಾಖೆ ಕಚೇರಿಯವರೆಗೆ ತೆರಳಿ ತಹಶೀಲ್ದಾರ್ ಸಂಜನಾ ಸಿ.ಎಸ್. ಅವರ ಮೂಲಕ ರಾಜ್ಯದ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಅಂಬೇಡ್ಕರ್ ಸೇವಾ ಸಮಿತಿ ಕೊಡಗು ಜಿಲ್ಲಾಧ್ಯಕ್ಷ ಹೆಚ್.ಆರ್. ಜಗದೀಶ್, ಪೊನ್ನಂಪೇಟೆ ತಾಲೂಕಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆದಿವಾಸಿ ಸಮುದಾಯದ ಸಾವಿರಾರು ಕುಟುಂಬಗಳು ತಾತ-ಮುತ್ತಾತನ ಕಾಲದಿಂದಲೂ ತೋಟದ ಲೈನ್ ಮನೆಗಳಲ್ಲಿ ವಾಸಿಸುತ್ತಿವೆ. ಸ್ವಂತ ಮನೆ ಹಾಗೂ ನಿವೇಶನವಿಲ್ಲದೆ ಅನೇಕ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಕೆಲವರು ಪ್ಲಾಸ್ಟಿಕ್ ಹೊದಿಕೆಯ ಮನೆಗಳಲ್ಲಿ ಮೂಲ ಸೌಕರ್ಯಗಳಿಲ್ಲದೆ ಬದುಕುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ನಿವೇಶನ ರಹಿತರಿಗೆ ಮನೆ ನಿರ್ಮಿಸಲು, ಸ್ಮಶಾನ ಸೇರಿದಂತೆ ವಿವಿಧ ಸಾರ್ವಜನಿಕ ಉದ್ದೇಶ ಗಳಿಗಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಐಟಿಡಿಪಿ ಇಲಾಖೆಗಳ ಹೆಸರಿನಲ್ಲಿ ಸರ್ಕಾರಿ ಜಾಗಗಳನ್ನು ಕಾಯ್ದಿರಿಸಲಾಗಿದೆ. ಆದರೆ, ಇಂತಹ ಹಲವು ಜಾಗಗಳು ಒತ್ತುವರಿಯಾಗಿದ್ದು, ಅರ್ಹ ಬಡ ಕುಟುಂಬಗಳಿಗೆ ನಿವೇಶನ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಪೊನ್ನಂಪೇಟೆ ತಾಲೂಕಿನಲ್ಲಿ ಲಭ್ಯವಿರುವ ಎಲ್ಲ ಸರ್ಕಾರಿ ಜಾಗಗಳನ್ನು ಸಮಗ್ರವಾಗಿ ಸರ್ವೆ ನಡೆಸಿ, ಒತ್ತುವರಿಯನ್ನು ತೆರವುಗೊಳಿಸಬೇಕು. ನಂತರ ನಿವೇಶನ ರಹಿತ ಎಸ್ಸಿ, ಎಸ್ಟಿ ಹಾಗೂ ಆದಿವಾಸಿ ಕುಟುಂಬಗಳಿಗೆ ಮನೆ ನಿರ್ಮಿಸಲು ನಿವೇಶನ ಹಾಗೂ ಭೂರಹಿತರಿಗೆ ಕೃಷಿ ಭೂಮಿ ಮಂಜೂರು ಮಾಡಿ ಗೌರವಯುತ ಬದುಕು ಕಟ್ಟಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ರಾಜು, ಮುತ್ತಣ್ಣ, ಮನು, ಮಣಿಕಂಠ, ಮಣಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.