ಸೋಮವಾರಪೇಟೆ, ನ. ೬: ಇಂದಿನ ಜೆನ್‌ಜಿ ಯುಗದಲ್ಲಿ ಮಕ್ಕಳು ಮಾದಕ ವ್ಯಸನಿಗಳಾಗುತ್ತಿ ದ್ದಾರೆ. ಅಮಲು ಪದಾರ್ಥಗಳ ದಾಸರಾಗುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ಇಡೀ ರಾಜ್ಯದಲ್ಲಿ ನಡೆಯಬೇಕಿದೆ. ಇದು ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಕೇಳಿ ಬಂದ ಅಭಿಪ್ರಾಯಗಳು.

ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ರಾಜ್ಯ ಶಾಸಕರ ವೇದಿಕೆ, ಯುನಿಸೆಫ್, ಸಿ.ಆರ್.ಟಿ. ಯೋಜನೆ ಹಾಗೂ ನಾವು ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಂಗಳವಾರದAದು ಇಲ್ಲಿನ ಪತ್ರಿಕಾಭವನದಲ್ಲಿ ಮಕ್ಕಳ ಹಕ್ಕುಗಳು, ಸಮಸ್ಯೆಗಳು ಹಾಗೂ ಅವುಗಳ ಪರಿಹಾರ ಕುರಿತು ಚರ್ಚಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಸಭೆ ನಡೆಯಿತು.

ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಮಕ್ಕಳ ಜೊತೆ ಸಂವಹನ ನಡೆಸಿದರು. ಮಕ್ಕಳ ಪ್ರತಿಯೊಂದು ಪ್ರಶ್ನೆಗಳಿಗೆ ಶಾಸಕರು ಉತ್ತರ ನೀಡಿದರು. ಈ ಸಂದರ್ಭ ಶಾಸಕರು ಮಾತನಾಡಿ, ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ .ಈ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನವನ್ನು ಕಾಯ್ದುಕೊಂಡಿದೆ. ಎಲ್ಲಾ ಶಾಲೆಗಳಲ್ಲೂ ಯೋಗ ಮತ್ತು ಕರಾಟೆ ಶಿಕ್ಷಣ ಮಕ್ಕಳಿಗೆ ದೊರೆಯುವಂತಾಗಬೇಕು. ಕೇವಲ ಅಂಕ ಗಳಿಸಲಿಕ್ಕೆ ಮಾತ್ರ ಶಿಕ್ಷಣವಾಗಬಾರದು. ಉತ್ತಮ ಬದುಕನ್ನು ರೂಪಿಸಲು ಶಿಕ್ಷಣದ ಅವಶ್ಯಕತೆ ಇದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ನಾವು ಪ್ರತಿಷ್ಠಾನದ ಕಾರ್ಯಕಾರಿ ಮಂಡಳಿ ನಿರ್ದೇಶಕಿ ಸುಮನಾ ಮ್ಯಾಥ್ಯೂ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಆಯ್ಕೆ ಆದ ಮಕ್ಕಳು ನವಂಬರ್ ೧೯ ಮತ್ತು ೨೦ ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್, ನಿವೃತ್ತ ಉಪನ್ಯಾಸಕರಾದ ಎಂ.ಬಿ.ತಿಲೋತ್ತಮೆ, ರೈತ ಸಂಘದ ಜಿಲ್ಲಾ ಮುಖಂಡರಾದ ಹೂವಯ್ಯ ಮಾಸ್ಟರ್ ಉಪಸ್ಥಿತರಿದ್ದರು. ನಾವು ಪ್ರತಿಷ್ಠಾನ ಸ್ಥಾಪಕ ಅಧ್ಯಕ್ಷ ಗೌತಮ್ ಕಿರಗಂದೂರು ಹಾಗೂ ಸಹನಾ ಕಾರ್ಯಕ್ರಮ ನಿರ್ವಹಿಸಿದರು.