ಬೆಂಗಳೂರು, ನ. ೮: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸುವ ಸಂಬAಧ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡುವಂತೆ ರಾಜ್ಯ ಚುನಾವಣಾ ಆಯೋಗವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪಿ.ಎಸ್. ಮರಬಳ್ಳಿ ಅವರು ನವೆಂಬರ್ ೭ರಂದು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು ೧೯೯೩ರ ನಿಯಮ ೬ರ ಅನ್ವಯ ಚುನಾವಣಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಒಂದು ತಾಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಒಬ್ಬ ಉಪವಿಭಾಗಾಧಿಕಾರಿ ಅಥವಾ ತತ್ಸಮಾನ ಹುದ್ದೆಯ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಬೇಕು. ಒಂದು ತಾಲೂಕಿನಲ್ಲಿ ೧೦ಕ್ಕಿಂತ ಹೆಚ್ಚು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದಲ್ಲಿ ಇಬ್ಬರು ಚುನಾವಣಾಧಿಕಾರಿಗಳನ್ನು ನೇಮಕ ಮಾಡಬೇಕಾಗಿದೆ.
ಪ್ರತಿಯೊಬ್ಬ ಚುನಾವಣಾಧಿಕಾರಿಗೆ ಸಹಾಯಕರಾಗಿ ತಹಶೀಲ್ದಾರ್ ಹುದ್ದೆಗೆ ತತ್ಸಮಾನ ಹುದ್ದೆಯ (ತಾಲೂಕು ತಹಶೀಲ್ದಾರ್ ಹೊರತುಪಡಿಸಿ) ಒಬ್ಬ ಅಧಿಕಾರಿಯನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಬೇಕು. ನೇಮಕಗೊಂಡ ಅಧಿಕಾರಿಗಳಿಗೆ ಯಾವ ಚುನಾವಣಾ ಕ್ಷೇತ್ರದ ಜವಾಬ್ದಾರಿ ನೀಡಲಾಗಿದೆ ಎಂಬುದನ್ನು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ನಮೂದಿಸಬೇಕು ಎಂದು ಆಯೋಗ ಸೂಚಿಸಿದೆ.
ತಾಲೂಕು ಪಂಚಾಯಿತಿಗೆ ಸಂಬAಧಿಸಿದAತೆ ಸರಾಸರಿ ೧೫ ಕ್ಷೇತ್ರಗಳಿಗೆ ಒಬ್ಬರಂತೆ ತಾಲೂಕು ತಹಶೀಲ್ದಾರ್ ಅಥವಾ ತತ್ಸಮಾನ ಹುದ್ದೆಯ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಬೇಕು. ಪ್ರತಿಯೊಬ್ಬ ಚುನಾವಣಾಧಿಕಾರಿಗೆ ಸಹಾಯಕರಾಗಿ ಒಬ್ಬ ಉಪತಹಶೀಲ್ದಾರ್ ಅಥವಾ ತತ್ಸಮಾನ ಹುದ್ದೆಯ ಅಧಿಕಾರಿಯನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಬೇಕು ಎಂದು ತಿಳಿಸಲಾಗಿದೆ.
ಪ್ರಸ್ತಾವನೆ ಸಲ್ಲಿಕೆ ಕಡ್ಡಾಯ
ಆದಷ್ಟು ಶೀಘ್ರದಲ್ಲಿ ಚುನಾವಣೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ, ಆಯೋಗದ ಸೂಚನೆಗಳಂತೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿ ಪಟ್ಟಿಯ ಪ್ರಸ್ತಾವನೆಯನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ನವೆಂಬರ್ ೧೬ರೊಳಗೆ ಅನುಮೋದನೆಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಆಯೋಗದಿಂದ ಅನುಮೋದನೆ ಪಡೆದ ಅಧಿಕಾರಿಗಳನ್ನು ಆಯೋಗದ ಪೂರ್ವಾನುಮತಿ ಇಲ್ಲದೆ ಬದಲಾಯಿಸುವಂತಿಲ್ಲ. ಅನುಮೋದನೆ ದೊರೆತ ಬಳಿಕ ನೇಮಕಾತಿ ಆದೇಶವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಿ, ಅದರ ಪ್ರತಿಯನ್ನು ಆಯೋಗಕ್ಕೆ ಕಳುಹಿಸಿಕೊಡಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
- ಇಸ್ಮಾಯಿಲ್ ಕಂಡಕರೆ