(ಕೆ.ಎಂ ಇಸ್ಮಾಯಿಲ್ ಕಂಡಕರೆ)
ಮಡಿಕೇರಿ, ನ. ೯: ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಸೃಜನ್-೨ ಅಭಿಯಾನ ಪೂರ್ಣಗೊಂಡಿದೆ. ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಗೆ ಒಳಪಡುವ ಆರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಹಾಗೂ ಮುಂದುವರಿಕೆ ಬಗ್ಗೆ ವೀಕ್ಷಕರಾಗಿರುವ ಕೆಪಿಸಿಸಿ ಉಪಾಧ್ಯಕ್ಷರಾದ ವೆಂಕಟೇಶ್ ಅವರು ಆರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಆಕಾಂಕ್ಷಿಗಳು ಮತ್ತು ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ನವೆಂಬರ್ ಎರಡನೇ ವಾರದೊಳಗೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಹೆಸರು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶೌಕತ್ ಅಲಿ ಅವರನ್ನು ಹೊರತುಪಡಿಸಿ ಉಳಿದ ಐದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅಧಿಕಾರಾವಧಿ ಐದು ವರ್ಷ ಪೂರ್ಣಗೊಂಡಿದೆ. ಕೆಪಿಸಿಸಿ ಆದೇಶದಲ್ಲಿ ಐದು ವರ್ಷ ಪೂರ್ಣಗೊಂಡಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ಎ ಇಸ್ಮಾಯಿಲ್ ಅವರು ರಾಜೀನಾಮೆ ನೀಡಿದ ಬಳಿಕ ಶೌಕತ್ ಅಲಿ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಇದೀಗ ಶೌಕತ್ ಅಲಿ ಅವರನ್ನೇ ಮುಂದುವರಿಸುವ ಸಾಧ್ಯತೆ ಇದೆ.
ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್ ಅವರು ಅಧ್ಯಕ್ಷ ಸ್ಥಾನಕ್ಕೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದಾರೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅರೆಭಾಷೆ ಗೌಡ ಜನಾಂಗಕ್ಕೆ ನೀಡಬೇಕೆಂಬ ಕೂಗು ಇದ್ದು, ಒಂದು ವೇಳೆ ಅರೆಭಾಷೆ ಗೌಡ ಜನಾಂಗಕ್ಕೆ ಅಧ್ಯಕ್ಷ ಸ್ಥಾನ ನೀಡಿದಲ್ಲಿ ಸೂರಜ್ ಹೊಸೂರು ಅವರಿಗೆ ನೀಡುವ ಸಾಧ್ಯತೆ ಇದೆ.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ನೀಡಿದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸ್ಥಾನ ಅರೆಭಾಷೆ ಗೌಡ ಜನಾಂಗಕ್ಕೆ ನೀಡುವುದು ಗ್ಯಾರಂಟಿ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಉಮ್ಮರ್, ಹ್ಯಾರಿಸ್ ಚೆಟ್ಟಿಮಾನಿ, ಮೋಹನ್ ರಾಜ್, ಸಂಪಾಜೆ ಸುರೇಶ್, ಸಂಪನ್ನ ಅಯ್ಯಪ್ಪ, ಶರೀನ್ ಹನೀಫ್ ಸಂಪಾಜೆ ಅರ್ಜಿ ಸಲ್ಲಿಸಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐದು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಹಂಸ, ಯಶ್ ದೋಲ್ಪಾಡಿ, ರವೂಫ್ ಮಡಿಕೇರಿ, ಅಪ್ರು ರವೀಂದ್ರ, ಪ್ರಭು ರೈ ಅರ್ಜಿ ಸಲ್ಲಿಸಿದ್ದಾರೆ. ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಎಚ್.ಎ. ಹಂಸ ಕೊಟ್ಟಮುಡಿ ಅವರನ್ನೇ ಮುಂದುವರಿಸುವ ಸಾಧ್ಯತೆ ಇದೆ. ಅಪ್ರು ರವೀಂದ್ರ, ಯಶ್ ದೋಲ್ಪಾಡಿ, ಹಾಗೂ ರವೂಫ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅರೆಭಾಷೆ ಗೌಡ ಜನಾಂಗಕ್ಕೆ ನೀಡಿಲ್ಲ. ಈ ಬಾರಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅರೆಭಾಷೆ ಜನಾಂಗಕ್ಕೆ ನೀಡಬೇಕೆಂದು ಕೇಳಿದ್ದೇವೆ. ನಾನು ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹಾಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ ಹೇಳಿದರು. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿಂದೆ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ನೀಡಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅರೆಭಾಷೆ ಗೌಡ ಜನಾಂಗಕ್ಕೆ ನೀಡುವ ಮೂಲಕ ಕಾಂಗ್ರೆಸ್ ಜಾತೀವಾರು ಸಮೀಕರಣವನ್ನು ಮಾಡಲಾಗುತ್ತಿತ್ತು. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಪುರಸಭಾ ಸದಸ್ಯ ರಾಫಿ, ಮಾಜಿ ವೀರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮಾದಂಡ ತಿಮ್ಮಯ್ಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಅವರು ಕೂಡ ಆಕಾಂಕ್ಷಿಯಾಗಿದ್ದಾರೆ. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಮೀದೇರಿರ ನವೀನ್ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗೋಣಿಕೊಪ್ಪ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅವರು ಅರ್ಜಿ ಸಲ್ಲಿಸಿದ್ದಾರೆ. ಮೀದೇರಿರ ನವೀನ್ ಅವರನ್ನು ಬದಲಾವಣೆ ಮಾಡಿದಲ್ಲಿ ಅಧ್ಯಕ್ಷ ಸ್ಥಾನವನ್ನು ಪ್ರಮೋದ್ ಗಣಪತಿ ಅವರಿಗೆ ನೀಡುವ ಸಾಧ್ಯತೆ ಇದೆ.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಹಾಲಿ ಅಧ್ಯಕ್ಷರಾಗಿರುವ ವಿ.ಪಿ. ಶಶಿಧರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ತೀರಾ ವಿರ¼.À ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ವಿ.ಪಿ. ಶಶಿಧರ್ ಅವರು ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಹೊಸ ಮುಖಗಳಿಗೆ ಅಧ್ಯಕ್ಷ ಸ್ಥಾನವನ್ನು ನೀಡುವ ಸಾಧ್ಯತೆ ಇದೆ. ಅಧ್ಯಕ್ಷ ಸ್ಥಾನಕ್ಕೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಕೀಂ ನೆಲ್ಲಿಹುದಿಕೇರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಿ.ಆರ್. ಪುಷ್ಪಲತಾ ಹಾಗೂ ನಟೇಶ್ ಗೌಡ ಅವರು ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಹಾಲಿ ಅಧ್ಯಕ್ಷ ಬಿ.ಬಿ. ಸತೀಶ್ ಬದಲಾವಣೆ ಬಹುತೇಕ ಖಚಿತಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಹಾಲಿ ಬ್ಲಾಕ್ ಕಾಂಗ್ರೆಸ್ ಖಜಾಂಜಿ ಸಿ. ಚೇತನ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ಗೌಡ ಹಾನಗಲ್, ಕೊಡಗು ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಸುಜಿತ್ ಡಿ, ಮೋಹನ್ ಮೌರ್ಯ, ಔರಂಗಜೇಬ್ ಕೊಡ್ಲಿಪೇಟೆ, ಬಿ.ಇ. ಜಯೇಂದ್ರ ಅವರು ಅರ್ಜಿ ಸಲ್ಲಿಸಿದ್ದಾರೆ. ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಹಾಗೂ ಮುಂದುವರಿಕೆಯ ಬಗ್ಗೆ ಶಾಸಕರ ಅಭಿಪ್ರಾಯವೇ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.