ಮಡಿಕೇರಿ, ನ. ೧೧: ಕೊಡವ ಹೆರಿಟೇಜ್ ಸೆಂಟರ್ನ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ರೂ. ೫ ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಶೀಘ್ರದಲ್ಲೇ ಕಾಮಗಾರಿಗಳಿಗೆ ಚಾಲನೆ ನೀಡುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಇಂದು ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕೊಡಗಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುವ ಕೊಡವ ಹೆರಿಟೇಜ್ ಸೆಂಟರ್ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಇಲಾಖೆಯ ಆಯುಕ್ತರಿಗೆ ಹೇಳಿದರು.