ಕೂಡಿಗೆ, ನ. ೧೨: ಪಟಾಕಿ ತ್ಯಜಿಸಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಸಂದೇಶದೊAದಿಗೆ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಮದಲಾಪುರ ಸರ್ಕಾರಿ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಿಸಲಾಯಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆ, ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಹಾಗೂ ಇಕೋ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಗೈಡ್ಸ್ ಸ್ವಯಂ ಸೇವಕರು ಹಾಗೂ ಶಾಲಾ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಆಕರ್ಷಕ ರಂಗೋಲಿ ಬಿಡಿಸಿ, ಮಣ್ಣಿನ ಹಣತೆಗಳನ್ನು ಬೆಳಗಿಸುವ ಮೂಲಕ ಹಸಿರು ದೀಪಾವಳಿ ಆಚರಿಸಿದರು. ಪಟಾಕಿ ತ್ಯಜಿಸಿ ಮಾಲಿನ್ಯ ಮುಕ್ತ ದೀಪಾವಳಿ ಆಚರಿಸುವ ಸಂಕಲ್ಪ ಕೈಗೊಂಡರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕಿ ಎಂ. ರೇಣುಕ, ಶಿಕ್ಷಕ ಇ. ಮಿಥುನ್ ಮಾತನಾಡಿ, ಪಟಾಕಿ ಸಿಡಿಸುವುದರಿಂದ ವಾಯು ಹಾಗೂ ಶಬ್ದ ಮಾಲಿನ್ಯ ಉಂಟಾಗುವುದಲ್ಲದೆ, ಪರಿಸರ ಮತ್ತು ಜೀವಜಗತ್ತಿನ ಮೇಲೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಪಟಾಕಿ ಸಿಡಿಸುವುದನ್ನು ತ್ಯಜಿಸಿ, ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಶಿಕ್ಷಕಿ ವೀಣಾ ಅವರು ಪಟಾಕಿ ಸಿಡಿಸುವುದರಿಂದ ಉಂಟಾಗುವ ಮಾಲಿನ್ಯ ಹಾಗೂ ಅದರ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಂದರ್ ವಿದ್ಯಾರ್ಥಿಗಳಿಗೆ ಹಸಿರು ದೀಪಾವಳಿ ಆಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಶಾಲೆಯ ಗೈಡ್ ಕ್ಯಾಪ್ಟನ್ ಕೆ.ಕೆ. ಗಾಯಿತ್ರಿ ಅವರು ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದಕ್ಕೂ ಮುನ್ನ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ಶಾಲಾ ಶಿಕ್ಷಕರಾದ ಮಧುಸೂದನ್, ಆರಿಫಾ, ರಹಮತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.