ಮಡಿಕೇರಿ, ನ. ೧೨: ನಗರದ ವಿಜಯ ವಿನಾಯಕ ದೇವಾಲಯದ ೨೮ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿAದ ನೆರವೇರಿತು.
ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಅರ್ಚಕರಾದ ಕೃಷ್ಣ ಉಪಾಧ್ಯಾಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಬೆಳಗ್ಗಿನಿಂದಲೇ ದೇವಾಲಯಕ್ಕೆ ಭಕ್ತರ ಆಗಮನ ಆರಂಭವಾಗಿತ್ತು. ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಲು ಭಕ್ತರು ನೆರೆದಿದ್ದರು. ನಗರದ ವಿವಿಧೆಡೆಗಳಿಂದ ಆಗಮಿಸಿದ ಭಕ್ತಾದಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.
ಧಾರ್ಮಿಕ ವಿಧಿವಿಧಾನಗಳ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು. ನಂತರ ಆಯೋಜಿಸಲಾಗಿದ್ದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.