ಮಡಿಕೇರಿ, ನ. ೧೨: ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾ. ೨೧ರಂದು ಮರಗೋಡಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸಾಪ ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಕಲೆ ಹಾಗೂ ಪರಂಪರೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಕಳೆದ ಎರಡು ವರ್ಷಗಳಿಂದ ಯಶಸ್ವಿಯಾಗಿ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ. ಇದೀಗ ಮೂರನೇ ವರ್ಷದ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ ಎಂದರು.
ಮರಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ ೮.೩೦ಕ್ಕೆ ವಿವಿಧ ಕಲಾ ತಂಡಗಳೊAದಿಗೆ ವಿದ್ಯಾರ್ಥಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಳ್ಳುವ ಮೆರವಣಿಗೆಗೆ ಉದ್ಯಮಿಗಳಾದ ಅವರೆಮಾದಂಡ ಶರಣ್ ಪೂಣಚ್ಚ ಹಾಗೂ ಎಡಿಕೇರಿ ಪ್ರಸನ್ನ ಚಾಲನೆ ನೀಡಲಿದ್ದಾರೆ.
ಮೆರವಣಿಗೆಯ ಬಳಿಕ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನಾಡಧ್ವಜಾರೋಹಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭ ಸ್ಮರಣ ಸಂಚಿಕೆಯ ಮುಖಪುಟ ಅನಾವರಣ ಹಾಗೂ ಸಾಹಿತಿ ಕಿಗ್ಗಾಲು ಗಿರೀಶ್ ರಚಿಸಿರುವ ಪುಸ್ತಕ ಬಿಡುಗಡೆ ನಡೆಯಲಿದೆ. ಇದರೊಂದಿಗೆ ಜಾದೂ ಪ್ರದರ್ಶನ, ನೃತ್ಯ, ಹಾಡುಗಾರಿಕೆ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಲಿವೆ ಎಂದು ಹರಿಣಿ ವಿಜಯ್ ತಿಳಿಸಿದರು.
ಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಮರಗೋಡು ಗೌಡ ಸಮಾಜ ಅಧ್ಯಕ್ಷ ಕಟ್ಟೆಮನೆ ಜನಾರ್ಧನ್, ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಕಾನಡ್ಕ ಶ್ಯಾಮ್, ಪ್ರಮುಖರಾದ ಮಠದಮನೆ ಧನಂಜಯ, ಭಾನುಪ್ರಿಯ ಹಾಜರಿದ್ದರು.