ಕುಶಾಲನಗರ, ನ. ೧೨: ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆಯ ಮಹತ್ವದ ಕುರಿತು ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆ, ರಾಜ್ಯ ವಿಜ್ಞಾನ ಪರಿಷತ್ತಿನ ಘಟಕ ಹಾಗೂ ಜಿಲ್ಲಾ ಪರಿಸರ ಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಹಸಿರು ದೀಪಾವಳಿ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್, ಮಾಲಿನ್ಯಕಾರಿ ಪಟಾಕಿಗಳನ್ನು ಸಿಡಿಸುವುದರಿಂದ ವಾಯು ಹಾಗೂ ಶಬ್ದ ಮಾಲಿನ್ಯ ಉಂಟಾಗುವುದಲ್ಲದೆ, ಪರಿಸರ ಮತ್ತು ಜೀವಜಗತ್ತಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಬಿ.ಜಿ. ಶಾಂತಿ ಮಾತನಾಡಿ, ಪಟಾಕಿ ಸಿಡಿಸುವುದರಿಂದ ಉಂಟಾಗುವ ಅನಾಹುತಗಳು ಹಾಗೂ ಪರಿಸರ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ನಂತರ ವಿದ್ಯಾರ್ಥಿಗಳು ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಜನಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಸ್.ಎನ್. ರಾಜೇಂದ್ರ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.