ಮಡಿಕೇರಿ, ನ. ೧೩: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಭದ್ರತೆ ಹಾಗೂ ಹಕ್ಕುಗಳ ರಕ್ಷಣೆಯೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ‘ಮಿಷನ್ ಶಕ್ತಿ ಯೋಜನೆ’ಯಡಿ ಕೊಡಗು ಜಿಲ್ಲೆಯಲ್ಲಿ ವಿವಿಧ ಸೌಲಭ್ಯ ಮತ್ತು ಸೇವೆ ಒದಗಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯು ಮಹಿಳೆಯರಲ್ಲಿ ಆತ್ಮವಿಶ್ವಾಸ, ಸ್ವಾವಲಂಬನೆ ಹಾಗೂ ಸುರಕ್ಷಿತ ಬದುಕಿನ ಭರವಸೆ ಮೂಡಿಸುವ ಮಹತ್ವದ ಕಾರ್ಯಕ್ರಮವಾಗಿದೆ.
ಮಹಿಳೆಯರ ಸಬಲೀಕರಣ ಮತ್ತು ಸುರಕ್ಷತೆಗೆ ಸಂಬAಧಿಸಿದAತೆ ಸಮಗ್ರ ವ್ಯವಸ್ಥೆಯನ್ನು ರೂಪಿಸಿರುವ ಮಿಷನ್ ಶಕ್ತಿ ಯೋಜನೆಯು ಮುಖ್ಯವಾಗಿ ಮಹಿಳೆಯರ ರಕ್ಷಣೆ, ಸಂಕಷ್ಟದ ಸಂದರ್ಭದಲ್ಲಿ ನೆರವು, ಕಾನೂನು ಸಹಾಯ, ಪುನರ್ವಸತಿ, ಉದ್ಯೋಗಾವಕಾಶ ಹಾಗೂ ಆರ್ಥಿಕ ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಈ ಯೋಜನೆಯಡಿ ಕಲ್ಪಿಸಲಾಗುತ್ತಿದೆ.
‘ಸಂಕಲ್ಪ’ ಯೋಜನೆಯಡಿ ಜಿಲ್ಲಾ ಮಟ್ಟದ ಮಹಿಳಾ ಸಬಲೀಕರಣ ಘಟಕ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಕಾನೂನು ಕ್ಷೇತ್ರಗಳಲ್ಲಿ ಅಗತ್ಯ ಮಾರ್ಗದರ್ಶನ ಮತ್ತು ನೆರವು ಒದಗಿಸುವುದು ಇದರ ಉದ್ದೇಶವಾಗಿದೆ.
ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಅಗತ್ಯ ಸಹಕಾರ ನೀಡಲಾಗುತ್ತಿದೆ. ಈವರೆಗೆ ೭೨ ಅರಿವು ಕಾರ್ಯಾಗಾರ ಆಯೋಜಿಸಲಾಗಿದೆ.
ಅಲ್ಲದೆ, ಕೊಡಗು ಜಿಲ್ಲೆಯಲ್ಲಿ ಈ ಕಾರ್ಯಕ್ರಮದಡಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಬೇಟಿ ಬಚಾವೋ, ಬೇಟಿ ಪಡಾವೋ’, ಪೋಕ್ಸೊ ಕಾಯ್ದೆ, ಮಕ್ಕಳ ಸಹಾಯವಾಣಿ ೧೦೯೮, ಮಹಿಳಾ ಸಹಾಯವಾಣಿ ೧೮೧ ಹಾಗೂ ತುರ್ತು ಸಹಾಯವಾಣಿ ೧೧೨ ಕುರಿತು ಅರಿವು ಮೂಡಿಸಲಾಗಿದೆ.
ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಭದ್ರತೆಗೆ ಆದ್ಯತೆ ನೀಡುವುದು, ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವುದು, ಗುಣಮಟ್ಟದ ಶಿಕ್ಷಣ ಒದಗಿಸುವುದು, ಕುಸಿಯುತ್ತಿರುವ ಲಿಂಗಾನುಪಾತವನ್ನು ಸುಧಾರಿಸುವುದು ಹಾಗೂ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಯೋಜನೆಯ ಪ್ರಮುಖ ಆಶಯಗಳಾಗಿವೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ, ಶಿಕ್ಷಣದ ಮಹತ್ವ ಹಾಗೂ ಮಹಿಳೆಯರ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ.
ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಸೆಂಟರ್: ಮಹಿಳೆಯರ ಮೇಲಿನ ದೌರ್ಜನ್ಯ, ಕೌಟುಂಬಿಕ ಹಿಂಸೆ, ಲೈಂಗಿಕ ಕಿರುಕುಳ ಹಾಗೂ ವಿವಿಧ ರೀತಿಯ ಶೋಷಣೆಗೆ ಒಳಗಾದ ಮಹಿಳೆಯರಿಗೆ ನೆರವು ನೀಡಲು ‘ಸಖಿ ಒನ್ ಸ್ಟಾಪ್ ಸೆಂಟರ್’ ಕಾರ್ಯನಿರ್ವಹಿಸುತ್ತಿದೆ.
ಸಂಕಷ್ಟದಲ್ಲಿರುವ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯ ಹಾಗೂ ಆಪ್ತ ಸಮಾಲೋಚನೆ ಸೇವೆ ಒದಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಮಹಿಳೆಯರು ಎದುರಿಸುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ರಕ್ಷಣೆ ಮತ್ತು ನೆರವು ಕಲ್ಪಿಸುವ ಮೂಲಕ ಅವರು ಗೌರವಯುತ ಬದುಕಿಗೆ ಮರಳಲು ಈ ಕೇಂದ್ರ ಸಹಕಾರಿಯಾಗಿದೆ.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ: ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ಮತ್ತು ಪೌಷ್ಟಿಕತೆಗೆ ನೆರವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಈ ಯೋಜನೆಯಡಿ ಮೊದಲ ಮಗುವಿನ ಜನನಕ್ಕೆ ಅರ್ಹ ಮಹಿಳೆಯರಿಗೆ ಎರಡು ಕಂತುಗಳಲ್ಲಿ ಒಟ್ಟು ೫ ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಎರಡನೇ ಮಗು ಹೆಣ್ಣು ಮಗುವಾಗಿದ್ದಲ್ಲಿ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಒಂದೇ ಕಂತಿನಲ್ಲಿ ೬ ಸಾವಿರ ರೂ. ನೆರವು ಒದಗಿಸಲಾಗುತ್ತದೆ.
ಗರ್ಭಾವಸ್ಥೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಪೌಷ್ಟಿಕ ಆಹಾರ ಸೇವನೆಗೆ ಈ ಆರ್ಥಿಕ ನೆರವು ಸಹಕಾರಿಯಾಗಲಿದೆ. ಅರ್ಹ ಮಹಿಳೆಯರು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ವಸತಿ: ಉದ್ಯೋಗದ ನಿಮಿತ್ತ ತಮ್ಮ ಊರುಗಳಿಂದ ದೂರವಿದ್ದು ಕಾರ್ಯನಿರ್ವಹಿಸುವ ಮಹಿಳೆಯರಿಗೆ ಸುರಕ್ಷಿತ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ‘ಸಖಿ ನಿವಾಸ’ ಯೋಜನೆ ಜಾರಿಯಲ್ಲಿದೆ.
ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ಹಾಗೂ ಅನುಕೂಲಕರ ವಸತಿ ವ್ಯವಸ್ಥೆ ಒದಗಿಸುವ ಮೂಲಕ ಯಾವುದೇ ಆತಂಕವಿಲ್ಲದೆ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ನೆರವಾಗುವುದು ಈ ಯೋಜನೆಯ ಆಶಯವಾಗಿದೆ. ಕೊಡಗು ಜಿಲ್ಲೆಯಲ್ಲಿ ೨೮ ಉದ್ಯೋಗಸ್ಥ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.
ಪಾಲನಾ ಕೇಂದ್ರಗಳ ಮೂಲಕ ಮಕ್ಕಳ ಆರೈಕೆ: ಉದ್ಯೋಗಸ್ಥ ಮಹಿಳೆಯರ ಮಕ್ಕಳ ಆರೈಕೆಗೂ ವಿಶೇಷ ಆದ್ಯತೆ ನೀಡಲಾಗಿದೆ. ಆರು ತಿಂಗಳಿAದ ಆರು ವರ್ಷದವರೆಗಿನ ಮಕ್ಕಳಿಗೆ ಪಾಲನಾ ಕೇಂದ್ರಗಳ ಮೂಲಕ ಆರೈಕೆ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಉದ್ಯೋಗಕ್ಕೆ ತೆರಳುವ ಮಹಿಳೆಯರು ತಮ್ಮ ಮಕ್ಕಳ ಸುರಕ್ಷತೆ ಮತ್ತು ಪೋಷಣೆಯ ಬಗ್ಗೆ ಆತಂಕಪಡದೆ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಈ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಆರೈಕೆ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಇದರ ಉದ್ದೇಶವಾಗಿದೆ.
ಸಹಾಯವಾಣಿ ಸಂಖ್ಯೆ: ಮಹಿಳೆಯರು ಮತ್ತು ಮಕ್ಕಳು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ತಕ್ಷಣ ನೆರವು ಪಡೆಯಲು ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
೧೮೧- ಮಹಿಳಾ ಸಹಾಯವಾಣಿ: ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ನೆರವು, ೧೦೯೮-ಮಕ್ಕಳ ಸಹಾಯವಾಣಿ: ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಮತ್ತು ನೆರವು, ೧೧೨ - ತುರ್ತು ಸಹಾಯವಾಣಿ: ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್ ಸೇರಿದಂತೆ ಅಗತ್ಯ ತುರ್ತು ಸೇವೆಗಳ ಸಂಪರ್ಕ ಜಾಗೃತಿ ಮತ್ತು ಸೌಲಭ್ಯಗಳ ಸದುಪಯೋಗ ಅಗತ್ಯ:
ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣ ಕೇವಲ ಸರ್ಕಾರದ ಯೋಜನೆಗಳಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಸಮಾಜದ ಪ್ರತಿಯೊಬ್ಬರ ಸಹಕಾರವೂ ಅಗತ್ಯವಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ, ಬಾಲ್ಯವಿವಾಹ, ಲಿಂಗತಾರತಮ್ಯ ಹಾಗೂ ಶೋಷಣೆಯ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ.
ಸರ್ಕಾರ ಒದಗಿಸುತ್ತಿರುವ ವಿವಿಧ ಯೋಜನೆಗಳ ಕುರಿತು ಮಹಿಳೆಯರಿಗೆ ಸಮರ್ಪಕ ಮಾಹಿತಿ ತಲುಪಿಸುವುದು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವAತೆ ಮಾಡುವುದು ಜವಾಬ್ದಾರಿಯಾಗಿದೆ.
ಕೊಡಗು ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳು ಮಿಷನ್ ಶಕ್ತಿ ಯೋಜನೆಯಡಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸುರಕ್ಷಿತ, ಗೌರವಯುತ ಹಾಗೂ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕಿದೆ. ಮಹಿಳೆಯರ ರಕ್ಷಣೆ, ಗೌರವ ಮತ್ತು ಸ್ವಾವಲಂಬನೆಗೆ ಆದ್ಯತೆ ನೀಡುವ ಮಿಷನ್ ಶಕ್ತಿ ಯೋಜನೆಯು ಸಬಲ ಸಮಾಜ ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.