ಮಡಿಕೇರಿ, ನ. ೧೪: ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಕನಸು ಕಟ್ಟಿಕೊಳ್ಳಬೇಕು. ಆ ದಿಸೆಯಲ್ಲಿ ಆಸಕ್ತಿ ಇರುವ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ಮಾಡುವತ್ತ ಗಮನ ಹರಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ೨೦೨೬ನೇ ಸಾಲಿನ ಯುವ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತು ವೇಗವಾಗಿ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ನಿರಂತರ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಪ್ರಯತ್ನ ಮಾಡಬೇಕು. ವೈದ್ಯಕೀಯ, ಇಂಜಿನಿಯರಿAಗ್ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡರೂ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಹೋದರತ್ವಕ್ಕೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವ ಮತ್ತು ಸಂವಿಧಾನದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಯುವ ಸಂಸತ್ ಕಾರ್ಯಕ್ರಮ ಆಯೋಜಿಸಿದೆ. ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯನಿರ್ವಹಣೆ, ವಿಧಾನಸಭಾಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಸಚಿವರು ಹಾಗೂ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳುವ ಜೊತೆಗೆ, ಸಂಸತ್ತಿನ ಮಾದರಿಯಲ್ಲಿ ಕಲಾಪಗಳಲ್ಲಿ ಭಾಗವಹಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜದ ಅಭಿವೃದ್ಧಿ ಕೇವಲ ಸರ್ಕಾರ ಅಥವಾ ಜನಪ್ರತಿನಿಧಿಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬರೂ ತಮ್ಮ ವೃತ್ತಿಯ ಜೊತೆಗೆ ಸಮಾಜದ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ವಹಿಸಬೇಕು. ದೊಡ್ಡ ಮಟ್ಟದ ಸೇವೆ ಮಾಡಲು ಸಾಧ್ಯವಾಗದಿದ್ದರೂ, ತಮ್ಮ ಕೈಲಾದಷ್ಟು ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಎಂಬ ಮೂರು ಪ್ರಮುಖ ಅಂಗಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಶಾಸಕಾಂಗ ಉತ್ತಮ ಕಾನೂನುಗಳನ್ನು ರೂಪಿಸಿದರೂ, ಕಾರ್ಯಾಂಗ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ನಿರೀಕ್ಷಿತ ಫಲಿತಾಂಶ ದೊರೆಯುವುದಿಲ್ಲ. ಮೂರು ಅಂಗಗಳ ನಡುವೆ ಸಮನ್ವಯ ಅತ್ಯಗತ್ಯ ಎಂದರು.
ಸಮಾಜದ ಪ್ರತಿಯೊಂದು ಸಮಸ್ಯೆಯನ್ನೂ ಬೇರೆಯವರ ಜವಾಬ್ದಾರಿ ಎಂದು ಭಾವಿಸುವ ಮನೋಭಾವ ಬದಲಾಗಬೇಕು. ಎಲ್ಲರೂ ವಿದ್ಯಾವಂತರಾಗಬೇಕು. ಬುದ್ಧಿವಂತಿಕೆ ಮತ್ತು ವಿದ್ಯಾಭ್ಯಾಸ ಎರಡೂ ವಿಭಿನ್ನವಾಗಿದ್ದು, ಶಿಕ್ಷಣವು ವ್ಯಕ್ತಿಯ ಆಲೋಚನೆ ಹಾಗೂ ಸಮಾಜದ ಕುರಿತಾದ ದೃಷ್ಟಿಕೋನವನ್ನು ವಿಸ್ತರಿಸುತ್ತದೆ. ಮುಂದಿನ ದಿನಗಳಲ್ಲಿ ಉನ್ನತ ಶೈಕ್ಷಣಿಕ ಅರ್ಹತೆ ಹೊಂದಿರುವವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ಸರ್ಕಾರ ಯುವ ಸಂಸತ್ ಕಾರ್ಯಕ್ರಮವನ್ನು ಆಯೋಜಿಸಿದೆ. ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಿಲನ ಭರತ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಅಧಿಕಾರಿಗಳು ಹಾಗೂ ಶಿಕ್ಷಕರು ಇದ್ದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಸ್ವಾಗತಿಸಿದರು. ಪವನ್ ಕುಮಾರ್ ನಿರೂಪಿಸಿದರು.