ಸಿದ್ದಾಪುರ, ನ. ೧೫: ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಸಮುದಾಯ ಸೇವೆಯ ಶಿಕ್ಷೆ ವಿಧಿಸಿದ್ದು, ಅದರಂತೆ ಆತ ಸಿದ್ದಾಪುರ ಪಟ್ಟಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಮೂಲಕ ಸೇವೆ ಸಲ್ಲಿಸಿದ ಘಟನೆ ಭಾನುವಾರ ನಡೆದಿದೆ. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಸಿದ್ದಾಪುರ ನಿವಾಸಿ ಆಸಿಮ್ (೩೨) ಎಂಬಾತ ಆರು ತಿಂಗಳ ಹಿಂದೆ ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ್ದ ಆರೋಪದ ಮೇರೆಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವೀರಾಜಪೇಟೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ವೀರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಲಯವು ಸಂಚಾರ ದಟ್ಟಣೆ ನಿಯಂತ್ರಿಸುವ ಸಮುದಾಯ ಸೇವೆಯ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ಆದೇಶದಂತೆ ಆಸಿಮ್ ಭಾನುವಾರ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಸಿದ್ದಾಪುರ ಪಟ್ಟಣದಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದನು.

ಇದಲ್ಲದೆ, ಮತ್ತೊಂದು ಪ್ರಕರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಆಸಿಮ್ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ವೀರಾಜಪೇಟೆ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಆಸಿಮ್‌ಗೆ ೫ ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ, ಸಮುದಾಯ ಸೇವೆ ಪೂರ್ಣಗೊಳಿಸಿರುವ ಬಗ್ಗೆ ಠಾಣಾಧಿಕಾರಿಯವರು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ನ್ಯಾಯಾಲಯ ವಿಧಿಸಿದ ಶಿಕ್ಷೆಯಂತೆ ಆರೋಪಿ ಸಾರ್ವಜನಿಕವಾಗಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದನ್ನು ಭಾನುವಾರದ ಸಂತೆಗೆ ಆಗಮಿಸಿದ್ದ ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಗಾಂಜಾ ಸೇವನೆ ಹಾಗೂ ಗಲಾಟೆ ನಡೆಸುವವರಿಗೆ ನ್ಯಾಯಾಲಯದ ಈ ಕ್ರಮ ಎಚ್ಚರಿಕೆಯ ಸಂದೇಶ ನೀಡಿದಂತಾಗಿದೆ.