ಸಿದ್ದಾಪುರ, ನ. ೧೫: ರಾಜ್ಯ ಸರ್ಕಾರ ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಸಿಪಿಐಎಂ ಪಕ್ಷದ ನೆಲ್ಲಿಹುದಿಕೇರಿ ಘಟಕದ ವತಿಯಿಂದ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿಪಿಐಎಂ ಮುಖಂಡ ಪಿ.ಆರ್. ಭರತ್, ರಾಜ್ಯ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡ ಜನರ ಮೇಲೆ ಹೊರೆ ಹೇರುತ್ತಿದೆ ಎಂದು ಆರೋಪಿಸಿದರು.
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಸರ್ಕಾರ ಇದೀಗ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ಅನ್ಯಾಯ ಎಸಗಿದೆ. ಕಾರ್ಮಿಕರಿಗೆ ಕನಿಷ್ಟ ವೇತನ ಜಾರಿಗೊಳಿಸದೆ ನಿರ್ಲಕ್ಷ್ಯ ವಹಿಸಿರುವ ಸರ್ಕಾರ ಇದೀಗ ಹಾಲಿನ ದರವನ್ನೂ ಏಕಾಏಕಿ ಹೆಚ್ಚಿಸಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಜೀವನ ನಿರ್ವಹಣೆ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಏರಿಕೆ ಮಾಡಿರುವ ಹಾಲಿನ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹಾಗೂ ಬಸ್ ಪ್ರಯಾಣ ದರವನ್ನು ತಕ್ಷಣ ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಪದಾಧಿಕಾರಿಗಳಾದ ಎಚ್.ಬಿ. ರಮೇಶ್, ಟಿ.ಟಿ. ಉದಯಕುಮಾರ್, ರಾಮಚಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.