ಸೋಮವಾರಪೇಟೆ, ನ. ೧೬: ಸಂತೆ ದಿನವಾದ ಸೋಮವಾರದಂದು ಪಟ್ಟಣ ವ್ಯಾಪ್ತಿಯಲ್ಲಿ ೧೨ ಮಂದಿಗೆ ಬೀದಿ ನಾಯಿಗಳು ಕಚ್ಚಿರುವ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ೫ ಮಂದಿಯ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಕಾಲಿನ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ. ಇದರೊಂದಿಗೆ ಆನೆಕೆರೆ, ಮಾನಸ ಹಾಲ್, ಗಾಂಧಿನಗರ ಭಾಗದಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾರಿಹೋಕರನ್ನು ಕಚ್ಚಿ ಗಾಯಗೊಳಿಸಿದೆ.
ಪಟ್ಟಣದ ಖಾಸಗಿ ಬಸ್ ನಿಲ್ದಾಣ ಬೀದಿ ನಾಯಿಗಳ ಅಡ್ಡೆಯಾಗಿದ್ದು, ಪಟ್ಟಣ ಪಂಚಾಯಿತಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆಯ ನಂತರ ಅದೇ ಸ್ಥಳದಲ್ಲಿ ಬಿಡಲಾಗುತ್ತಿದೆ. ಹೀಗಿದ್ದರೂ ನಾಯಿಗಳ ಸಂತತಿ ಹೆಚ್ಚುತ್ತಿದೆ. ಬಸ್ ನಿಲ್ದಾಣದಲ್ಲಿ ನಡೆದಾಡಲೂ ಸಹ ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಒಟ್ಟು ೧೨ ಮಂದಿ ನಾಯಿ ದಾಳಿಯಿಂದ ಗಾಯಗೊಂಡಿದ್ದಾರೆ. ಪ್ರಶಾಂತ್, ಹನುಮಾನ್, ಕುಶಾಲಪ್ಪ, ಅನೀಸ, ಮಮತ, ಬೃಂದಾ, ಅಜೂರ್, ಸೌಕತ್ ಆಲಿ, ಹಾರ್ಲಿ, ಹರ್ಷಿಯಾ, ಕಾಳಪ್ಪ , ಕಾರ್ಯಪ್ಪ ಎಂಬವರುಗಳು ಬೀದಿ ನಾಯಿ ದಾಳಿಯಿಂದ ಗಾಯಗೊಂಡು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಟ್ಟಣದಲ್ಲಿ ಬೀಡುಬಿಟ್ಟಿರುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.