ಮಡಿಕೇರಿ, ನ. ೧೬: ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ತಳೂರು ಕಿಶೋರ್ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾದಪ್ಪ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗಲಿವೆ. ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಸಿಆರ್ಪಿ ಚಂದ್ರಿಕಾ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾ ಕಾರಂಜಿಯ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ವಿಕಸನದಲ್ಲಿ ಅದರ ಪಾತ್ರದ ಕುರಿತು ವಿವರಿಸಿದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.