ಮಡಿಕೇರಿ, ನ. ೧೬: ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ತಾ.೨೦ ರಂದು ವೀರಾಜಪೇಟೆಯಿಂದ ಮಡಿಕೇರಿಗೆ ಮತ್ತು ತಾ.೨೩ ರಂದು ಬೆಟ್ಟದಳ್ಳಿಯಿಂದ ಸೋಮವಾರಪೇಟೆಯವರೆಗೆ ಪ್ರತಿಭಟನೆ - ಜನಜಾಗೃತಿ ಜಾಥಾ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದರು.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಭ್ರಷ್ಟಾಚಾರ ಮಿತಿ ಮೀರಿದೆ, ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ. ಕೊಡಗು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಆರೋಪಿಸಿದರು.
ಹಾಲಿನ ದರ ಏರಿಕೆಯ ಹೊರೆಯನ್ನು ಗ್ರಾಹಕರ ಮೇಲೆ ಹಾಕಲಾಗಿದೆ. ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರ ಪ್ರಯಾಣಕ್ಕೆ ತೀವ್ರ ತೊಂದರೆಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಳೆದ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ ಎಂದು ದೂರಿದರು.
ಸಿ ಮತ್ತು ಡಿ ಭೂಮಿ ಸಮಸ್ಯೆ, ವನ್ಯಜೀವಿಗಳ ದಾಳಿ ಸೇರಿದಂತೆ ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುತ್ತಿಲ್ಲ. ಸರಕಾರದ ಜನವಿರೋಧಿ ನೀತಿ ಮತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ತೋರುತ್ತಿರುವ ನಿರ್ಲಕ್ಷö್ಯದ ವಿರುದ್ಧ ತಾ.೨೦ರಂದು ವೀರಾಜಪೇಟೆಯಿಂದ ಮಡಿಕೇರಿವರೆಗೆ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಬೆಂಬಲದೊAದಿಗೆ ಪ್ರತಿಭಟನೆ - ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಮಾರ್ಗಮಧ್ಯೆ ವಿವಿಧೆಡೆ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಗಳನ್ನು ನಡೆಸಿ ಜಾಥಾ ಮುಂದುವರಿಯಲಿದೆ. ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಸಭೆ ನಡೆಸಿದ ಬಳಿಕ ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಕೊಡಗು ಜಿಲ್ಲೆಯ ರಸ್ತೆಗಳ ಸ್ಥಿತಿ ಅತ್ಯಂತ ಹೀನಾಯವಾಗಿದೆ. ಗ್ರಾಮೀಣ ಭಾಗದ ರಸ್ತೆಗಳು ಅಧೋಗತಿಗೆ ತಲುಪಿವೆ. ಜಿಲ್ಲೆಯ ಇಬ್ಬರು ಶಾಸಕರು ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕೈಗೊಂಡಿರುವ ವಿವಿಧ ಕಾಮಗಾರಿಗಳ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ತೆರಿಗೆ ಹೆಚ್ಚಳದ ಮೂಲಕ ಸರಕಾರ ಜನಸಾಮಾನ್ಯರ ರಕ್ತ ಹೀರುತ್ತಿದೆ. ಹೊಸ ವಾಹನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲಾಗುತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಮಡಿಕೇರಿಯಲ್ಲಿ ೭೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈಗ ಆಸ್ಪತ್ರೆಯಲ್ಲಿ ಔಷಧಿಗಳೂ ಸಮರ್ಪಕವಾಗಿ ಲಭ್ಯವಿಲ್ಲದೆ ರೋಗಿಗಳು ಹೊರಗಿನಿಂದ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಔಷಧಿ ಖರೀದಿಗೂ ಹಣವಿಲ್ಲದಂತಾಗಿದೆ ಎಂದು ಆರೋಪಿಸಿದ ಅವರು ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿಯಿಲ್ಲದಿದ್ದರೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಸುಮಾರು ೨೫ ಸಾವಿರ ಎಕರೆ ಕೃಷಿ ಭೂಮಿಯನ್ನು ಅರಣ್ಯವೆಂದು ಘೋಷಿಸಲು ಸರಕಾರ ಮುಂದಾಗಿದ್ದು, ಕೃಷಿಕರಲ್ಲಿ ಆತಂಕ ಎದುರಾಗಿದೆ. ಅರಣ್ಯ ಇಲಾಖೆಯಿಂದ ರೈತರಿಗೆ ಕಿರುಕುಳವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾ.೨೩ರಂದು ಬೆಟ್ಟದಳ್ಳಿಯಿಂದ ಸೋಮವಾರಪೇಟೆಯವರೆಗೆ ಪ್ರತಿಭಟನಾ - ಜನಜಾಗೃತಿ ಜಾಥಾ ನಡೆಯಲಿದ್ದು, ಸಂಸದ ಯದುವೀರ್ ಒಡೆಯರ್ ಕೂಡ ಪಾಲ್ಗೊಳ್ಳಲಿದ್ದಾರೆ.
೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ರೈತಾಪಿ ವರ್ಗಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ
ಮೂಡಿಸಲಾಗುವುದು ಎಂದು ಮಾಜಿ ಸಚಿವರು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮಾತನಾಡಿ, ರಾಜ್ಯ ಸರಕಾರ ದಿವಾಳಿಯಾಗಿದೆ, ಜನಸಾಮಾನ್ಯರನ್ನು ಹಾಗೂ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸರಕಾರದ ರೈತ ವಿರೋಧಿ ಧೋರಣೆಯಿಂದ ಕೊಡಗಿನಲ್ಲಿ ಸಿ ಮತ್ತು ಡಿ ಭೂಮಿ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಜನಪರ ಕಾಳಜಿಯಿಲ್ಲದ ಆಡಳಿತದಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ಮುಖ್ಯಮಂತ್ರಿಗಳು ವಿಶೇಷ ಅನುದಾನದ ಆಮಿಷವೊಡ್ಡಿ ಇತರ ಪಕ್ಷಗಳ ಶಾಸಕರನ್ನು ಕಾಂಗ್ರೆಸ್ಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸರಕಾರವನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇಡೀ ರಾಜ್ಯಕ್ಕೆ ಕಾವೇರಿ ನೀರನ್ನು ಒದಗಿಸುವ ಕಾವೇರಿ ನಾಡು ಕೊಡಗು ಜಿಲ್ಲೆಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ಮನು ಮುತ್ತಪ್ಪ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಉಪಸ್ಥಿತರಿದ್ದರು.