ನಾಪೋಕ್ಲು, ನ. ೧೭: ಆರೋಗ್ಯ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಹೇಳಿದರು.
ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಜಾಸೇವಾ ಅಭಿಯಾನದಡಿ, ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಾಹಿತಿ-ಶಿಕ್ಷಣ ಸ್ಟಾಲ್ಗೆ ಅವರು ಭೇಟಿ ನೀಡಿ ರಕ್ತದೊತ್ತಡ ಪರಿಶೀಲನೆ ಮಾಡಿಸಿಕೊಂಡು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮಧುಮೇಹ (ಡಯಾಬಿಟಿಸ್) ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದುರು. ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಪ್ರದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದು ಗಮನಾರ್ಹವಾಗಿದೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು. ಈ ರೋಗದಿಂದ ಮುಕ್ತರಾಗಲು ಪ್ರತಿಯೊಬ್ಬರೂ ಕಡ್ಡಾಯವಾಗಿ ದೈಹಿಕ ವ್ಯಾಯಾಮ ಮಾಡಬೇಕು ಹಾಗೂ ಒಳ್ಳೆಯ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುನಿಲ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ.ವಿ. ಶ್ರೀನಾಥ್ ಮತ್ತು ಪ್ರೇಮ್ ಕುಮಾರ್, ಡಾ. ರಾಶೀಫ, ಸಿ.ಹೆಚ್.ಒ ಗಳಾದ ಮಿಲನ್ ಹಾಗೂ ಮಿಲನ, ದೇವಿ ಪ್ರಸಾದ್ ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.