ಪೊನ್ನಂಪೇಟೆ, ನ. ೧೭: ಸರ್ಕಾರಿ ಶಾಲೆಗಳತ್ತ ಪೋಷಕರು ಹಾಗೂ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಶಿಕ್ಷಕರು ವಿಶೇಷ ಪ್ರಯತ್ನ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ವೀರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ಸಮೂಹ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ೨೦೨೬-೨೭ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಹಲವು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಶಿಕ್ಷಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಕಳಕಂಡ ಮಹೇಶ್ ಮಾತನಾಡಿ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ. ಪ್ರತಿಯೊಬ್ಬ ಮಗುವಿನಲ್ಲಿಯೂ ವಿಭಿನ್ನ ಪ್ರತಿಭೆಗಳಿದ್ದು, ಅವುಗಳನ್ನು ಅನಾವರಣ ಗೊಳಿಸಲು ಈ ವೇದಿಕೆ ಉತ್ತಮ ಅವಕಾಶ ಕಲ್ಪಿಸುತ್ತದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡಬೇಕು. ತೀರ್ಪುಗಾರರು ಯಾವುದೇ ಪೂರ್ವಾಗ್ರಹವಿಲ್ಲದೆ ನ್ಯಾಯಯುತ ತೀರ್ಪು ನೀಡಬೇಕು ಎಂದರು.

ಮುಖ್ಯ ಶಿಕ್ಷಕ ಬಿ.ಎಂ. ವಿಜಯ್ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳಲ್ಲಿ ವಿವಿಧ ಪ್ರತಿಭೆಗಳಿದ್ದು, ಅವುಗಳನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಮಕ್ಕಳು ಯಾವುದೇ ಅಂಜಿಕೆಯಿಲ್ಲದೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹಾರೈಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಜುನೈದ್ ಸಿ.ಎ. ಮಾತನಾಡಿ, ಕಲೆ ದೇವರ ವರದಾನವಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು. ಎಸ್ ಡಿ ಎಂ ಸಿ ಉಪಾಧ್ಯಕ್ಷೆ ನಾಗವೇಣಿ ಮಾತನಾಡಿದರು.

ತಾಲೂಕಿನ ೫ ಕ್ಲಸ್ಟರ್‌ಗಳ ೧೪ ಶಾಲೆಗಳ ವಿದ್ಯಾರ್ಥಿಗಳು ಛದ್ಮವೇಷ, ನೃತ್ಯ, ಭಾಷಣ, ಮಣ್ಣಿನ ಆಕೃತಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಈ ಸಂದರ್ಭ ಬಿಆರ್‌ಪಿ ವಾಮನ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಮಕೃಷ್ಣ, ಶಿಕ್ಷಕರು, ಎಸ್. ಡಿ. ಎಂ. ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿ. ಆರ್. ಪಿ. ವಾಸುವರ್ಮ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ನಿರೂಪಿಸಿ, ಸಹಶಿಕ್ಷಕಿ ಐ.ಎಂ. ರೋಜಿ ವಂದಿಸಿದರು.