ಸಿದ್ದಾಪುರ, ನ. ೧೭: ನೆಲ್ಲಿಹುದಿಕೇರಿಯ ನೈಮ ಸಂಸ್ಥೆ ಹಾಗೂ ಕೇರಳದ ಕಣ್ಣೂರು ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ನೈಮ ಸಂಸ್ಥೆಯ ಗೌರವಾಧ್ಯಕ್ಷ ಕೆ.ಎಂ. ಬಶೀರ್ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಶಿಬಿರದಲ್ಲಿ ನುರಿತ ತಜ್ಞ ವೈದ್ಯರು ಭಾಗವಹಿಸಿದ್ದು, ಮಕ್ಕಳು ಸೇರಿದಂತೆ ವಯೋವೃದ್ಧರ ಆರೋಗ್ಯ ತಪಾಸಣೆ ನಡೆಸಲಾಯಿತು. ಸಾರ್ವಜನಿಕರು ಇಂತಹ ಉಚಿತ ಶಿಬಿರಗಳ ಸದುಪಯೋಗ ಪಡೆದುಕೊಂಡು ಆರೋಗ್ಯದ ಕುರಿತು ಮಾಹಿತಿ ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕೇರಳದ ಕಣ್ಣೂರು ಮೆಡಿಕಲ್ ಕಾಲೇಜಿನ ಮಕ್ಕಳ ತಜ್ಞರು, ಸ್ತಿçà ರೋಗ ತಜ್ಞರು, ಹೃದ್ರೋಗ ತಜ್ಞರು ಹಾಗೂ ಜನರಲ್ ಮೆಡಿಸಿನ್ ವಿಭಾಗದ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ೧೫೦ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಕಾರ್ಯಕ್ರಮದಲ್ಲಿ ನೈಮ ಸಂಸ್ಥೆಯ ಉಪಾಧ್ಯಕ್ಷ ಪಿ.ಎಚ್. ಅಪ್ಸಲ್, ಕಾರ್ಯದರ್ಶಿ ಪಿ.ಕೆ.ಟಿ. ಮುಸ್ತಫ, ನಿರ್ದೇಶಕ ಸಂಶುದ್ದೀನ್, ಕಣ್ಣೂರು ಮೆಡಿಕಲ್ ಕಾಲೇಜಿನ ಮುಖ್ಯ ವೈದ್ಯಾಧಿಕಾರಿ ಡಾ. ಕಾವ್ಯ, ಸಂಸ್ಥೆಯ ಮುಖ್ಯಸ್ಥ ಸಮೀರ್ ಟಿ.ಕೆ., ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಎ.ಕೆ. ಹಕೀಂ, ಸುಹಾದ ಅಶ್ರಫ್, ಭರತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.