ವೀರಾಜಪೇಟೆ, ನ. ೧೭: ರಾಜ್ಯ ಸರಕಾರದ ಜನವಿರೋಧಿ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ವೀರಾಜಪೇಟೆ ಶಾಖೆ ವತಿಯಿಂದ ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಲಾಯಿತು.
‘ಭರವಸೆಗಳ ಸುರಿಮಳೆ ಬರೀ ಬೊಗಳೆ..! ಸಿಕ್ಕಿದೆ ಬೆಲೆ ಏರಿಕೆಯ ಬರೆಗಳ ಮಾಲೆ..!' ಎಂಬ ಘೋಷವಾಕ್ಯದ ಬ್ಯಾನರ್ ಹಿಡಿದು ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಎ.ಸಿ. ಸಾಬು, ರಾಜ್ಯದ ಎಲ್ಲೆಡೆ ಸಿಪಿಐ(ಎಂ) ವತಿಯಿಂದ ಬೆಲೆ ಏರಿಕೆ ವಿರುದ್ಧ ನಿರಂತರ ಹೋರಾಟಗಳು ನಡೆಯುತ್ತಿವೆ. ಚುನಾವಣೆಗೂ ಮುನ್ನ ಜನತೆಗೆ ಆಕರ್ಷಕ ಭರವಸೆಗಳ ಸುರಿಮಳೆಗೈದ ರಾಜ್ಯ ಸರಕಾರ, ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸುವ ಮೂಲಕ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಒಂದು ಕೈಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ, ಮತ್ತೊಂದು ಕೈಯಲ್ಲಿ ದಿನನಿತ್ಯದ ವಸ್ತುಗಳ ಬೆಲೆ, ವಿದ್ಯುತ್ ದರ, ಇಂಧನ, ಬಸ್ ಪ್ರಯಾಣ ದರ ಹಾಗೂ ವಿವಿಧ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕುತ್ತಿದೆ. ಸರಕಾರದ ಈ ದ್ವಂದ್ವ ನೀತಿಯಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ ಎಂದು ಆರೋಪಿಸಿದರು.
ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯೆ ಪದ್ಮಿನಿ ಶ್ರೀಧರ್ ಮಾತನಾಡಿ, ಬೆಲೆ ಏರಿಕೆಯ ನೇರ ಹೊಡೆತ ಮಹಿಳೆಯರು ಮತ್ತು ಕುಟುಂಬ ನಿರ್ವಹಣೆ ಮಾಡುವ ಗೃಹಿಣಿಯರ ಮೇಲೆ ಬಿದ್ದಿದೆ. ಅಡುಗೆ ಅನಿಲ, ಅಡುಗೆ ಎಣ್ಣೆ, ಬೇಳೆಕಾಳುಗಳು, ತರಕಾರಿ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿರುವುದರಿಂದ ಬಡ ಕುಟುಂಬಗಳು ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರ ಸಬಲೀಕರಣದ ಮಾತನಾಡುವ ಸರ್ಕಾರ, ಬೆಲೆ ಏರಿಕೆಯ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಯನ್ನು ಕಸಿದುಕೊಳ್ಳುತ್ತಿದೆ. ಕೂಡಲೇ ಸರ್ಕಾರ ಬೆಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದಲ್ಲಿ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಸಿಪಿಐಎಂ ವೀರಾಜಪೇಟೆ ಶಾಖಾ ಕಾರ್ಯದರ್ಶಿ ಕೆ.ಎಸ್. ರಮೇಶ್ ಮಾತನಾಡಿ, ದಿನನಿತ್ಯದ ಆಹಾರ ಪದಾರ್ಥಗಳು, ಇಂಧನ ಹಾಗೂ ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರು, ರೈತರು ಮತ್ತು ಕೂಲಿ ಕಾರ್ಮಿಕರು ಜೀವನ ನಡೆಸುವುದೇ ಸಂಕಷ್ಟಕರವಾಗಿದೆ. ಜನಸಾಮಾನ್ಯರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಸರಕಾರದ ಧೋರಣೆ ಖಂಡನೀಯವಾಗಿದ್ದು, ಬಡವರ ಪರವಾಗಿ ನಿಲ್ಲಬೇಕಿದ್ದ ಆಡಳಿತ ವ್ಯವಸ್ಥೆಯೇ ಕಾರ್ಪೊರೇಟ್ ಶಕ್ತಿಗಳ ಪರವಾಗಿ ನಿಂತಿದೆ. ಸರಕಾರ ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.
ಮತ್ತೋರ್ವ ಮುಖಂಡ ರದೀಶ್ ಮಾತನಾಡಿ, ರಾಜ್ಯಾದ್ಯಂತ ಬೆಲೆ ಏರಿಕೆ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನವಿರೋಧಿ ನೀತಿಗಳನ್ನು ಕೈಬಿಟ್ಟು, ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಸರಕಾರ ತಕ್ಷಣ ಮುಂದಾಗಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿಪಿಐ(ಎಂ) ಮುಖಂಡ ಕೆ.ಕೆ. ಹರಿದಾಸ್, ಖಾಲಿದ್, ಹಮೀದ್, ಸಾಧಿಕ್ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.