ಸಿದ್ದಾಪುರ, ನ. ೧೮: ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ರೂ. ೨.೩೦ ವೆಚ್ಚದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಎರಡು ಕೋಟಿ ೩೦ ಲಕ್ಷ ವೆಚ್ಚದಲ್ಲಿ ಸಿದ್ದಾಪುರ - ಪಾಲಿಬೆಟ್ಟ ರಸ್ತೆಯನ್ನು ಅಭಿವೃದ್ಧಿಪಡಿಸುವ ಮೂಲಕ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಈಗಾಗಲೇ ವೀರಾಜಪೇಟೆ ಕ್ಷೇತ್ರದಲ್ಲಿ ವಿವಿಧ ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದು ಮತ್ತಷ್ಟು ರಸ್ತೆಗಳ ಅಭಿವೃದ್ಧಿ ಕಾರ್ಯಗಳ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಇದೆ ಎಂದು ಮಾಹಿತಿ ನೀಡಿದರು. ಸಿದ್ದಾಪುರದಿಂದ ನೆಲ್ಲಿಹುದಿಕೇರಿಗೆ ತೆರಳುವ ರಸ್ತೆ ಗುಂಡಿ ಬಿದ್ದಿವೆ. ಈ ಬಗ್ಗೆ ದೂರುಗಳು ಕೇಳಿಬಂದಿದ್ದು ಗುಂಡಿ ಮುಚ್ಚುವ ಕಾಮಗಾರಿ ನಡೆಯುತ್ತದೆ ಎಂದು ತಿಳಿಸಿದರು. ಇದಲ್ಲದೆ ಸದ್ಯದಲ್ಲಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಹೇಳಿದರು.

ಬಿಜೆಪಿ ಪಕ್ಷವು ಹಮ್ಮಿಕೊಂಡಿರುವ ಹೋರಾಟಗಳು ಕೇವಲ ಮುಂದಿನ ಚುನಾವಣೆಯ ಗಿಮಿಕ್ ಆಗಿದ್ದು, ಅನಗತ್ಯವಾಗಿ ಆರೋಪ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲವೆಂದು ತಿಳಿಸಿದರು. ವೀರಾಜಪೇಟೆ ಕ್ಷೇತ್ರದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ರಸ್ತೆ ಕಾಮಗಾರಿಗಳು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿದ್ದು ಅಭಿವೃದ್ಧಿಯನ್ನು ಸಹಿಸಲಾರದೆ ಬಿ.ಜೆ.ಪಿ.ಯವರು ಅಪಪ್ರಚಾರ, ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರಿದರು. ಮುಂದೆಯೂ ಕೂಡ ಜನಪರ ಕಾರ್ಯಕ್ರಮ ಮಾಡುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಹೊಸೂರು ಸೂರಜ್, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್. ವೆಂಕಟೇಶ್, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಕೆ.ಯು. ಮಜೀದ್, ರಫೀಕ್, ಜಾಫರ್ ಆಲಿ, ವಿ.ಕೆ. ಬಶೀರ್, ಪಳನಿಸ್ವಾಮಿ, ಅನಿಲ್, ಶೀನಪ್ಪ, ಚೇಕು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳು ಇನ್ನಿತರರು ಹಾಜರಿದ್ದರು.