ವೀರಾಜಪೇಟೆ, ನ. ೧೯: ವೀರಾಜಪೇಟೆಯ ಶಾಸಕರ ಗೃಹ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಅಧ್ಯಕ್ಷತೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಆಗಮಿಸಿದ್ದರು.
ಈ ಸಂದರ್ಭ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕ ಇಸ್ಮಾಯಿಲ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಅಲಿ, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಧ್ಯಾನ್ ದೇವಯ್ಯ, ನಾಪೋಕ್ಲು ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೋಡಿ ಸೇರಿದಂತೆ ಸಫ್ವಾನ್, ರಾಹುಲ್ ಮತ್ತಿತರರು ಉಪಸ್ಥಿತರಿದ್ದರು.
ನೂತನವಾಗಿ ಯುವ ಕಾಂಗ್ರೆಸ್ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸದಸ್ಯರುಗಳು, ಪದಾಧಿಕಾರಿಗಳ ಆಯ್ಕೆಯ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮಾತನಾಡಿ, ಯುವ ಕಾಂಗ್ರೆಸ್ ಕಾರ್ಯಕರ್ತರ ಪಾತ್ರ ಪಕ್ಷ ಸಂಘಟನೆ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅತ್ಯಂತ ಮಹತ್ವದ್ದಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆಯೇ ಎಂಬುದರ ಕುರಿತು ಕಾರ್ಯಕರ್ತರು ಹೆಚ್ಚಿನ ಮಾಹಿತಿ ಸಂಗ್ರಹಿಸಬೇಕು ಎಂದರು.