ಮೂರ್ನಾಡು, ನ. ೨೧: ಪಠ್ಯ ಪುಸ್ತಕಗಳ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ತಮ್ಮ ಜೀವನದಲ್ಲಿ ಸಾಧನೆಗೈಯಲು ಸಾಧ್ಯ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು.

ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಮತ್ತು ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ೨೦೨೬-೨೭ ಸಾಲಿನ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ಉದ್ಘಾಟನೆಯನ್ನು ನೆರವೇರಿಸಿ, ಸಭಾಧ್ಯಕ್ಷ ಸ್ಥಾನದಿಂದ ಮಾತನಾಡುತ್ತಿದ್ದ ಅವರು ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಆದರೆ ಅದನ್ನು ತಿದ್ದಿಕೊಳ್ಳುವ ಕಾರ್ಯ ಆಗಬೇಕು. ಇಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಶಾಲೆಗಳಲ್ಲಿ ಸಿಗುವ ವೇದಿಕೆಗಳನ್ನು ಸಂಪೂರ್ಣವಾಗಿ ಬಳಸಿಕೊಂಡಾಗ ಮಾತ್ರ ಇವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹೊಮ್ಮಿಸಲು ಸಾಧ್ಯವಾಗುತ್ತದೆ. ಸೋಲು ಗೆಲುವು ಇರುವಂತಹುದೆ, ಆದರೆ ಪರಿಶ್ರಮ ಅಗತ್ಯವಿದೆ ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ಆಯೋಜಿಸಬಾರದು. ಇಂತಹ ಕಾರ್ಯಕ್ರಮಗಳು ಗ್ರಾಮೀಣ ಮಟ್ಟದಲ್ಲಿನ ಬೇರೆ ಬೇರೆ ಶಾಲೆಗಳಲ್ಲಿ ಪ್ರತಿ ವರ್ಷವು ನಡೆಸುವಂತಾಗಬೇಕು. ಆಗ ಮಾತ್ರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇಲ್ಲಿ ಹೆಚ್ಚಿನ ಅವಕಾಶಗಳು ಸಿಗುವಂತಾಗುತ್ತದೆ. ಈ ಶಾಲೆಗೆ ಅತಿ ಅವಶ್ಯಕತೆ ಇರುವಂತಹ ಶಾಶ್ವತ ವೇದಿಕೆ ಹಾಗೂ ಸಭಿಕರು ಕುಳಿತುಕೊಳ್ಳಲು ಚಾವಣಿ ನಿರ್ಮಾಣದ ಕಾರ್ಯ, ಶಾಲೆಯ ರಸ್ತೆ ಹಾಗೂ ತಡೆಗೋಡೆ ನಿರ್ಮಾಣದ ಕಾಮಗಾರಿಗಳನ್ನು ಶಾಸಕರ ನಿಧಿಯಿಂದ ಅನುದಾನ ಒದಗಿಸಿ ಅದಷ್ಟು ಬೇಗ ಕಾಮಗಾರಿ ಪ್ರಾರಂಭಗೊಳಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ ಅವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್. ಆರ್.ಪಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ(ಪ್ರಬಾರ) ಮಂಜುಳ ಚಿತ್ರಾಪುರ, ಮಡಿಕೇರಿ ತಾಲೂಕು ಪ್ರಬಾರ ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರ. ಕೆ.ಎಂ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಜೆ. ಕುಮಾರ್, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಪಿ.ಎಸ್. ರವಿಕೃಷ್ಣ, ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಕೆ.ಎಂ. ಶರತ್, ಮಡಿಕೇರಿ ತಾಲೂಕು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಡಿ. ಗಣೇಶ್, ಮಡಿಕೇರಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಶಾಲಪ್ಪ. ಎಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಮೋಹನ್ ಪೆರಾಜೆ, ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಪಿ. ರಮ್ಯ, ಮಡಿಕೇರಿ ತಾಲೂಕು ಶಿಕ್ಷಣ ಸಂಯೋಜಕಿ ಐ.ಜೆ. ಜಾನೆಟ್, ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಂಸ, ಮೂರ್ನಾಡು ಕ್ಲಸ್ಟರ್‌ನ ಅಧಿಕಾರಿ ಉಷಾ ಮತ್ತು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ. ಕೆ ಅವರುಗಳು ಉಪಸ್ಥಿತರಿದ್ದರು. ಮಡಿಕೇರಿ ತಾಲೂಕು ಮಟ್ಟದ ೧೩ ಕ್ಲಸ್ಟರ್‌ನಿಂದ ಆಗಮಿಸಿದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಗಳಲ್ಲಿ ಭಾಗವಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ. ಕೆ ಸ್ವಾಗತಿಸಿ, ಸಹಶಿಕ್ಷಕಿ ದೇಚಮ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

-ಟಿ.ಸಿ. ನಾಗರಾಜ್, ಮೂರ್ನಾಡು