ಮಡಿಕೇರಿ, ನ. ೨೪: ಅರೆಭಾಷೆ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪಸರಿಸುವ ಉದ್ದೇಶದಿಂದ ತಾ. ೨೯ರಂದು ಚೆಂಬು ಗ್ರಾಮದಲ್ಲಿ ಅರೆಭಾಷೆ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೮.೩೦ಕ್ಕೆ ಸಂಪಾಜೆ ಗೇಟ್ ಬಳಿಯಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಪ್ರಗತಿಪರ ಕೃಷಿಕರಾದ ಇಂದಿರಾ ದೇವಿಪ್ರಸಾದ್ ಮೆರವಣಿಗೆಗೆ ಚಾಲನೆ ನೀಡಲಿದ್ದು, ಕೂಡಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ವಾಹನ ಮೆರವಣಿಗೆ ನಡೆಯಲಿದೆ ಎಂದರು. ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಾಹಿತಿ ಹಾಗೂ ಲೇಖಕಿ ಲೀಲಾ ದಾಮೋದರ ಕುಂದಲ್ಪಾಡಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ ೧೨ ಗಂಟೆಗೆ ‘ಕೃಷಿ ಬದುಕು ಮತ್ತು ಅದರ ಪ್ರಸ್ತುತ ಸವಾಲುಗಳು’ ಹಾಗೂ ‘ಭಾಷೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಮಾರ್ಗ’ ಎಂಬ ವಿಷಯಗಳ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಮಧ್ಯಾಹ್ನ ೧ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ೨ ಗಂಟೆಗೆ ಅರೆಭಾಷೆ ಕವಿಗೋಷ್ಠಿ ಹಾಗೂ ಸಂಜೆ ೩ ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಆರು ಮಂದಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಮ್ಮೇಳನದ ವಿಶೇಷ ಆಕರ್ಷಣೆಯಾಗಿ ವಿವಿಧ ಮಳಿಗೆಗಳನ್ನು ತೆರೆಯಲಾಗುವುದು. ಸಾಹಿತ್ಯಾಸಕ್ತರು, ಅರೆಭಾಷೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಚಂದ್ರಶೇಖರ್ ಪೇರಾಲು, ಲೋಕೇಶ್ ಊರುಬೈಲು, ಸಂದೀಪ್ ಪೂಳಕಂಡ, ಮೋಹನ್ ಪೊನ್ನಚ್ಚನ ಹಾಗೂ ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.