ನಾಪೋಕ್ಲು, ನ. ೨೪: ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಬಿರ್ಚ್ಯಾರ್ ಕಲಾಡ್ಚ ಹಬ್ಬವು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ಸಂಪನ್ನಗೊAಡಿತು.
ಇಗ್ಗುತ್ತಪ್ಪ ದೇವರ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರು ಮೊದಲು ಎತ್ತುಪೋರಾಟದೊಂದಿಗೆ ದೇವಾಲಯಕ್ಕೆ ಆಗಮಿಸಿ, ಎತ್ತುಪೋರಾಟವನ್ನು ಒಪ್ಪಿಸಿದರು. ಭಕ್ತಾದಿಗಳ ತುಲಾಭಾರ ಸೇವೆ ಸೇರಿದಂತೆ ವಿವಿಧ ಹರಕೆ ಹಾಗೂ ಪೂಜಾ ಕಾರ್ಯಗಳು ನೆರವೇರಿದವು. ಮಹಾಪೂಜೆಯ ನಂತರ ಭಕ್ತರಿಗೆ ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ನಂತರ ದೇವರ ನಡೆಯಲ್ಲಿ ನಿಂತು ತಕ್ಕ ಮುಖ್ಯಸ್ಥರು ನಾಡಿನ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವರ ಪ್ರದರ್ಶನ ಬಲಿ ನೆರವೇರಿತು. ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಹಾಗೂ ಭಕ್ತಾದಿಗಳು ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಶ್ರದ್ಧಾಭಕ್ತಿಯಿಂದ ತೆರಳಿದರು.
ಈ ಸಂದರ್ಭ ಪೇರೂರು ಹಾಗೂ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯಗಳ ತಕ್ಕ ಮುಖ್ಯಸ್ಥರು ಕೂಡ ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ತೆರಳಿದರು. ಅರ್ಚಕರು ಶುದ್ಧಕಲಶ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನಡೆಯಿತು. ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಗಳಾಗಿ ವಿಂಗಡಿಸಿ, ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯಗಳ ತಕ್ಕ ಮುಖ್ಯಸ್ಥರು ಹಂಚಿಕೊAಡರು. ಬಳಿಕ ದೇವರ ಕಟ್ಟು ಸಡಿಲಿಸಿ, ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೇವಾಲಯಕ್ಕೆ ಮರಳಿದ ಭಕ್ತರು ಸಂಜೆ ನಡೆದ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಈ ಮೂಲಕ ಕಲಾಡ್ಚ ಹಬ್ಬವು ಸಂಭ್ರಮದಿAದ ಜರುಗಿತು.
ಈ ಸಂದರ್ಭ ನಾಡಿನ ಹಾಗೂ ದೇವಾಲಯದ ೧೩ ತಕ್ಕ ಮುಖ್ಯಸ್ಥರು, ವ್ಯವಸ್ಥಾಪನಾ ಸಮಿತಿ, ಭಕ್ತಜನ ಸಂಘದ ಪದಾಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.